

ಬೆಂಗಳೂರು: ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಅಪರ್ಣ ಇಂದು ಮೃತಪಟ್ಟಿದ್ದಾರೆ. ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಕೊನೆಯಿಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.