ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ; ಸಿಎಂ ಸಿದ್ದರಾಮಯ್ಯ ಭರವಸೆ

Siddaramaiah
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಚರ್ಚಿಸಿದರು. ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದ್ದು, ತಾತ್ಕಾಲಿಕ ಸಮಿತಿ ರಚನೆ ಮಾಡಿ ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ.

ಹಂತಹಂತವಾಗಿ ಪರಿಷ್ಕರಣೆ

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೇ.30ರಂದು ಶಿವಮೊಗ್ಗದಲ್ಲಿ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡುತ್ತಾ, ಈಗಾಗಲೇ ಈ ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ, ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಹಂತ ಹಂತವಾಗಿ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದ್ದು, ಕೆಲವೊಂದು ಸಲಹೆ ನೀಡಿದ್ದಾರೆ ಎಂದು ಹೇಳಿದ್ದರು.

ಪಠ್ಯ ಪುಸ್ತಕ ಪರಿಷ್ಕರಿಸಿದ್ದ ಹಿಂದಿನ ಸರ್ಕಾರ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್ ಪಠ್ಯ ಪರಿಷ್ಕರಣೆಗೆ ಸೂಚನೆ ನೀಡಿದ್ದರು. ಅದರಂತೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯ ಪರಿಷ್ಕರಣೆ ಮಾಡಿ, ಕೆಲ ಪಠ್ಯಗಳನ್ನು ತೆಗೆದು, ಹೊಸ ಪಠ್ಯಗಳನ್ನು ಸೇರ್ಪಡೆಗೊಳಿಸಿತ್ತು. ಇದು ರಾಜಕೀಯವಾಗಿ ಹಲವು ಆರೋಪ-ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಗಿದೆ. ಅದರಲ್ಲೂ ಪ್ರಮುಖ ಲೇಖಕರ ಪಠ್ಯಗಳನ್ನು ಪಠ್ಯಕ್ರಮದಿಂದ ಕೈಬಿಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net