ಕೋವಿಡ್​ ಭ್ರಷ್ಟಾಚಾರದ ಬಗ್ಗೆ ಯತ್ನಾಳ್ ಸ್ಪೋಟಕ ಹೇಳಿಕೆ! ಸಿಎಂ ಸಿದ್ದರಾಮಯ್ಯ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

ವಿಜಯವಾಣಿ - 2023-12-26T183258.867
Published on

ಬೆಂಗಳೂರು: ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದ ವೇಳೆ 40% ಕಮಿಷನ್ ಪಡೆಯುತ್ತಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದ ಕಾಂಗ್ರೆಸ್​ಗೆ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕೊಟ್ಟ ಸ್ಫೋಟಕ ಹೇಳಿಕೆ ಪುಷ್ಟಿ ನೀಡಿದಂತಾಗಿದೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಹೀಗಿದೆ.

"ಕೊರೊನಾ ಕಾಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಆರೋಪಿಸುವ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ" ಎಂದು ಸಿದ್ದರಾಮಯ್ಯ ಹೇಳಿದರು.

"ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಸುಮಾರು 40,000 ಕೋಟಿ ರೂ. ಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ?" ಎಂದಿದ್ದಾರೆ.

"ಬಸನಗೌಡ ಪಾಟೀಲ್ ಯತ್ನಾಳ್ ಹಿಟ್ ಅಂಡ್ ರನ್ ಮಾಡಬಾರದು. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕೆಂಬ ಬದ್ಧತೆಯನ್ನು ಅವರು ಹೊಂದಿದ್ದರೆ, ತಮ್ಮ ಆರೋಪವನ್ನು ತಾರ್ಕಿಕ ಅಂತ್ಯದೆಡೆಗೆ ಒಯ್ಯಬೇಕು. ಇದಕ್ಕಾಗಿ ಕೊರೊನಾ ಭ್ರಷ್ಟಾಚಾರದ ಬಗ್ಗೆ ತಮ್ಮ ಬಳಿ ಇರುವ ಎಲ್ಲ ಮಾಹಿತಿಯನ್ನು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ ತನಿಖಾ ಆಯೋಗಕ್ಕೆ ಒಪ್ಪಿಸಬೇಕು" ಎಂದರು.

"ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವು ಸಚಿವರ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ" ಎಂದರು.

"ತನ್ನನ್ನು ದೇಶದ 'ಚೌಕಿದಾರ' ಎಂದು ಬಣ್ಣಿಸಿಕೊಳ್ಳುತ್ತಿರುವ ಮತ್ತು 'ನ ಖಾವೂಂಗಾ ನಾ ಖಾನೆ ದೂಂಗಾ' ಎಂದು ಆಗಾಗ ಗುಟುರು ಹಾಕುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮದೇ ಪಕ್ಷದ ನಾಯಕ ಮಾಡುತ್ತಿರುವ ಇಂತಹ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಮೌನವಾಗಿರುವುದು ನಿಗೂಢ. ಇದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಲ್ಲಿ ಕೇಂದ್ರದ ನಾಯಕರಿಗೂ ಪಾಲು ಹೋಗಿದೆ ಎನ್ನುವ ಆರೋಪಕ್ಕೆ ಎಡೆ ಮಾಡಿಕೊಡುವುದಿಲ್ಲವೇ ಪ್ರಧಾನಿಗಳೇ?" ಎಂದು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಬರೆದು ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net