ಎಂಎಸ್​ಪಿ ಯೋಜನೆಯನ್ನು ಜಾರಿಗೆ ತರಲು ಕೇಂದ್ರಕ್ಕೆ ಒತ್ತಾಯ: CM ಸಿದ್ದರಾಮಯ್ಯ

dk (69) (1)
Published on

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು CM ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಗುರುವಾರ ಉದ್ಘಾಟಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.

ರಾಗಿ ತಿಂದವನು ನಿರೋಗಿ

ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.

ಸಿರಿಧಾನ್ಯ ಉತ್ಪಾದನ-ಕರ್ನಾಟಕ 3ನೇ ಸ್ಥಾನ

ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಅತಿದೊಡ್ಡ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿರುತ್ತದೆ ಎಂದರು.

ಸಂಶೋಧನಾ ಕೇಂದ್ರ

ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ. ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ.

ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net