

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಸಾಲಗಾರರ ಕಾಟಕ್ಕೆ ತಾಳಲಾರದೆ ಬಡ ವರ್ಗದ ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ. ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ವಿನಂತಿಸಿದರು.
"ಮೈಕ್ರೋ ಫೈನಾನ್ಸ್ನಿಂದ ಜನರಿಗಾಗುತ್ತಿರುವ ತೊಂದರೆ ನಮ್ಮ ಗಮನದಲ್ಲಿದೆ. ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ.28ರಿಂದ 30ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ" ಎಂದರು.
"ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ" ಎಂದರು.