ಗ್ಯಾರಂಟಿಗಳ ಅನುಷ್ಠಾನದ ಕುರಿತು ಸಿಎಂ ಸರಣಿ ಸಭೆ; ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ

Siddaramaiah
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಘೋಷಿಸಲಾಗಿತ್ತು.

ಸರಣಿ ಸಭೆ

ಈ ಕುರಿತು ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಲಿದ್ದಾರೆ. ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸಿಎಂಗೆ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net