ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

siddu
Published on

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೆ 187 ಕೋಟಿ ರೂಪಾಯಿ ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಜೋಶಿ ಹೇಳಿದರು.

ಸಿಎಂಗೂ ನೀಡಲಿ ನೋಟಿಸ್: ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ ಎಸ್​ಐಟಿ ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಸಿಎಂ ನೇರ ಹೊಣೆ: ಇನ್ನು, ಮೂಡಾ ಹಗರಣದಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಅವರ ಭಾಗಿತ್ವ ಇಲ್ಲದೇ ಈ ಮಟ್ಟದ ಭ್ರಷ್ಟಾಚಾರ ಅಸಾಧ್ಯ. ಅವರಿಗೆ ಗೊತ್ತಿದ್ದೆ ವಂಚನೆ ನಡೆದಿದೆ. ಮೂಡಾ ಹಗರಣದಲ್ಲಿ ಸಿಎಂ ನೈತಿಕ ಹೊಣೆ ಹೊರಬೇಕು. ಈ ಎರಡೂ ಬಹು ದೊಡ್ಡ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆ ಆಗಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net