ಡಿಸಿಎಂ ಡಿ.ಕೆ.ಶಿವಕುಮಾರ್ ನೀತಿ ಸಂಹಿತೆ ಉಲ್ಲಂಘನೆ; ಬಿಜೆಪಿ ಆರೋಪ

BJP complaint
Published on

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ವೋಟು ಹಾಕಿದರೆ ನೀರು ಪೂರೈಸುತ್ತೇವೆ ಎಂದು ಮತದಾರರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆದರಿಕೆ, ಕಲಬುರಗಿಯಲ್ಲಿ ಅಗ್ರಿಕಲ್ಚರ್ ಹಬ್ ನಿರ್ಮಿಸಲು 39 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಮತದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಆಮಿಷವೊಡ್ಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನೀತಿ ಸಂಹಿತೆ ಉಲ್ಲಂಘನೆಯಡಿ ಡಿ.ಕೆ.ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳುವ ಜತೆಗೆ ಡಿ.ಕೆ.ಶಿವಕುಮಾರ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಗುರುವಾರ ಸಲ್ಲಿಸಿದ ದೂರಿನಲ್ಲಿ ಕೋರಿದೆ.

ರಾಜಕೀಯ ವೈಷಮ್ಯಕ್ಕಾಗಿ ಕುಣಿಗಲ್ ತಾಲೂಕು ಚಿಕ್ಕಅರ್ಜೇನಹಳ್ಳಿ ಗ್ರಾಮದ ಪ್ರೇಮ್‌ಕುಮಾರ್ ಬಿನ್ ಪಿ.ಜಿ.ರಾಮಯ್ಯ ತೋಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ.

ಆದರೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಬೆದರಿಕೆ ಹಾಕಿ ಸುಳ್ಳು ಹೇಳಿಕೆಗೆ ನೊಂದ ರೈತನಿಂದ ಸಹಿ ಹಾಕಿಸಿಕೊಂಡಿದ್ದಾರೆ. ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿ ರೈತರನಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ನೇತೃತ್ವದ ನಿಯೋಗ ಗುರುವಾರ ದೂರು ಸಲ್ಲಿಸಿದೆ. ಪಕ್ಷದ ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್, ಸದಸ್ಯ ಯಶವಂತ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net