ತಿ.ನರಸೀಪುರ: ಚೊಚ್ಚಲ ಐಪಿಎಲ್ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಆರ್‌ಸಿಬಿ ವಿಜಯೋತ್ಸವದಲ್ಲಿ ಆದಂತಹ ಕಾಲ್ತುಳಿತ ದುರಂತದಲ್ಲಿ ರಾಜ್ಯ ಸರ್ಕಾರ ತನ್ನ ಲೋಪಗಳನ್ನು ಮುಚ್ಚಿಕೊಳ್ಳಲು ದಕ್ಷ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತುಪಡಿಸಿರುವುದು ಅತ್ಯಂತ ಅವಿವೇಕದ ನಡೆ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್ ಖಂಡಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದು, ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ. ಈ ಅವಘಡಕ್ಕೆ ಸರ್ಕಾರವೇ ನೇರ ಹೊಣೆ. ಆದರೆ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳಲು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಮತ್ತು ಇತರ ಅಧಿಕಾರಿಗಳನ್ನು ಅಮಾನತು ಮಾಡಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರ ಯಾವುದೇ ಮುಂಜಾಗ್ರತೆ ಇಲ್ಲದೆ ಕಾರ್ಯಕ್ರಮ ಆಯೋಜನೆ ಮಾಡಿದ್ದೇ ದುರಂತಕ್ಕೆ ಕಾರಣ. ಆದರೆ ಸರ್ಕಾರ ನಮ್ಮದೇನು ತಪ್ಪಿಲ್ಲ, ಪೋಲಿಸ್ ಇಲಾಖೆಯದ್ದೇ ತಪ್ಪು ಎಂಬಂತೆ ಬಿಂಬಿಸುತ್ತಿರುವುದು ಖಂಡನೀಯ. ಗುಪ್ತಚರ ಇಲಾಖೆ ಮಾಹಿತಿ ಪಡೆಯುವಲ್ಲಿ ಎಡವಿದ ಗೃಹ ಸಚಿವರನ್ನು ಸಂಪುಟದಿಂದ ಕೈಬಿಡಬೇಕು. ಯಾವುದೇ ಕರ್ತವ್ಯ ಲೋಪ ಎಸಗದೆ ನಿರಪರಾಧಿಯಾಗಿರುವ ಪೊಲೀಸ್ ಕಮಿಷನರ್ ಮತ್ತು ಅವರ ಸಹೋದ್ಯೋಗಿ ಅಧಿಕಾರಿಗಳ ಅಮಾನತು ಆದೇಶವನ್ನು ತಕ್ಷಣವೇ ಸರ್ಕಾರ ಹಿಂಪಡೆಯಬೇಕು ಎಂದು ತಾಯೂರು ಪ್ರಕಾಶ್ ಆಗ್ರಹಿಸಿದ್ದಾರೆ.