ಕಾರ್ಯಕ್ರಮಕ್ಕೆ ಸಮುದಾಯದ ಮುಖಂಡರೇ ಗೈರು

07 HANUR 1
ಹನೂರಿನಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿದರು. ಮುಮ್ತಾಜ್ ಬಾನು, ಕೆ.ಎನ್.ಚೈತ್ರಾ, ಮಹೇಶ್, ಇಂದ್ವಾಡಿ ಶಿವಣ್ಣ, ಮಹಾದೇಶ್ ಇತರರು ಇದ್ದರು.
Published on

ಹನೂರು: ರಾಜ್ಯ ಸರ್ಕಾರ ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯ ಹಿನ್ನಲೆಯಲ್ಲಿ ಮಂಗಳವಾರ ಹನೂರಿನಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ನಾಯಕ ಸಮುದಾಯದ ಮುಖಂಡರು ಗೈರಾಗುವುದರ ಮೂಲಕ ಪರೋಕ್ಷವಾಗಿ ಅಸಾಮಾಧಾನ ವ್ಯಕ್ತಪಡಿಸಿದರು.

ಹನೂರಿನಲ್ಲಿ ಪ್ರತಿವರ್ಷ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿತ್ತು. ಅದರಂತೆಯೇ ಸೆ.20 ರಂದು ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸಮುದಾಯದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿತ್ತು. ಈ ವೇಳೆ ಸಮುದಾಯದ ನಾಯಕರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸುವಂತೆ ಸಲಹೆ ನೀಡಿದ್ದರು.

ಅದರಂತೆಯೇ ಮಂಗಳವಾರ ಬೆಳಗ್ಗೆ 11ರ ವೇಳೆಯಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಆವರಣದಲ್ಲಿ ವಾಲ್ಮೀಕಿ ಜಯಂತಿಯನ್ನು ಆಯೋಜಿಸಲಾಗಿತ್ತು. ಆದರೆ ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಬೆರಳೆಣಿಕೆಯಷ್ಟು ಮುಖಂಡರು ಮಾತ್ರ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಸೇರಿದಂತೆ ಸಮುದಾಯದ ಪ್ರಮುಖ ನಾಯಕರು ಗೈರಾಗುವುದರ ಮೂಲಕ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಂತರವನ್ನು ಕಾಯ್ದುಕೊಂಡು ಬೇಸರವನ್ನು ವ್ಯಕ್ತಪಡಿಸಿದರು.

ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಅವರು ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಮುಮ್ತಾಜ್‌ಬಾನು, ಸದಸ್ಯರಾದ ಮಹೇಶ್‌ನಾಯ್ಕ, ಮಹೇಶ್, ಮಹಾದೇಶ್, ತಹಸೀಲ್ದಾರ್ ಕೆ.ಎನ್ ಚೈತ್ರಾ, ಬಿಇಒ ಮಹೇಶ್, ತಾಲೂಕು ಪರಿಶಿಷ್ಟ ವರ್ಗಗಳ ಸಹಾಯಕ ನಿರ್ದೇಶಕ ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಸೆಸ್ಕ್ ಎಇಇ ರಂಗಸ್ವಾಮಿ, ಪಿಡಬ್ಲ್ಯುಡಿ ಎಇಇ ಚಿನ್ನಣ್ಣ, ಇನ್‌ಸ್ಪೆಕ್ಟರ್ ಆನಂದಮೂರ್ತಿ, ಆರ್‌ಐ ಶೇಷಣ್ಣ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net