

ಶಿಕಾರಿಪುರ: ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಕಾಲೇಜು ಸಮಗ್ರ ಪ್ರಶಸ್ತಿ ಪಡೆದು ಅತ್ಯುತ್ತಮ ಸಾಧನೆ ಮಾಡಿದೆ ಎಂದು ಶ್ರೀ ಚನ್ನಮಲ್ಲಿಕಾರ್ಜುನ ವಿದ್ಯಾಸಂಸ್ಥೆ ಕಾರ್ಯದರ್ಶಿ ಗೀತಾ ಚನ್ನಯ್ಯ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ವಿದ್ಯಾಸಂಸ್ಥೆ 37 ವರ್ಷಗಳಿಂದ ಸಾಕಷ್ಟು ಸಾಧನೆ ಮಾಡಿದೆ. ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಾಮಾಜಿಕ ಕಳಕಳಿಗೂ ಹೆಚ್ಚಿನ ಆದ್ಯತೆ ನೀಡಿದೆ. ನಮ್ಮ ವಿದ್ಯಾರ್ಥಿಗಳು ಪ್ರತಿ ವರ್ಷ ಫಲಿತಾಂಶದಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಸಂಸ್ಥೆಗೆ ಹೆಸರು ತಂದಿದ್ದಾರೆ. ಈಗ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಿಕಾರಿಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಚನ್ನಮ್ಮಲ್ಲಿಕಾರ್ಜುನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲಕರ ವಿಭಾಗದ ಸಮಗ್ರ ಪ್ರಶಸ್ತಿ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬಾಲಕರ ಚಾಂಪಿಯನ್‌ಶಿಪ್ ಹಾಗೂ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಬಾರಿಗೆ ಪಡೆದಿದೆ ಎಂದು ಹೇಳಿದರು.
ಬಾಲಕರ ವಿಭಾಗ 100, 200, 400 ಮೀ. ಓಟ, ಲಾಂಗ್ ಜಂಪ್, ಟ್ರಿಪಲ್ ಜಂಪ್, 4್ಡ100 ರಿಲೇ, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಖೋ-ಖೋನಲ್ಲಿ ಪ್ರಥಮ, 800 ಮೀ, 3000 ಮೀ. ಓಟದ ಸ್ಪರ್ಧೆ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ 400 ಮೀ., 800 ಮೀ. ಓಟದ ಸ್ಪರ್ಧೆ, ಲಾಂಗ್ ಜಂಪ್, ಟ್ರಿಪಲ್ ಜಂಪ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ, ಹ್ಯಾಮರ್ ಥ್ರೋನಲ್ಲಿ ದ್ವಿತೀಯ, 4್ಡ100 ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾ ಎಂದು ತಿಳಿಸಿದರು. ಸಂಸ್ಥೆಯ ಅಧ್ಯಾಪಕರು ಸುದ್ದಿಗೋಷ್ಠಿಯಲ್ಲಿದ್ದರು.