

ಶಿವಮೊಗ್ಗ:ಅಲ್ಲಮಪ್ರಭು ಜನ್ಮಸ್ಥಳ ಬಳ್ಳಿಗಾವಿ, ಶಿವಮೊಗ್ಗದ ಅಲ್ಲಮಪ್ರಭು ಮೈದಾನದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಬೇಕು. ಜಿಲ್ಲೆಗೆ ಅವಶ್ಯವಿರುವ ಯೋಜನೆಗಳ ಬಗ್ಗೆ ವರದಿ ಸಿದ್ಧಪಡಿಸಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಬಳ್ಳಿಗಾವಿಯಲ್ಲಿ ಏನು ಮಾಡಬಹುದು ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳ ತಂಡವೊಂದನ್ನು ಅಲ್ಲಿಗೆ ಕಳುಹಿಸಬೇಕು. ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡುವುದು ಅವಶ್ಯ ಎನಿಸಿದರೆ ಆ ಬಗ್ಗೆ ಪ್ರಸ್ತಾವನೆ ನೀಡಿದರೆ ಸರ್ಕಾರದ ಹಂತದಲ್ಲಿ ಪ್ರಯತ್ನ ಮುಂದುವರಿಸುತ್ತೇನೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಸೊರಬ ತಾಲೂಕು ಚಂದ್ರಗುತ್ತಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಹಾಗೂ ಪುರಾತತ್ವ ಇಲಾಖೆಯಿಂದ ತೊಂದರೆಯಾಗಿದೆ. ಅಲ್ಲಿನ ಸಮಗ್ರ ಅಭಿವೃದ್ಧಿಗೆ ಕನಿಷ್ಟ 10 ಎಕರೆ ಜಾಗ ಬೇಕು. ಆದರೆ ಅರಣ್ಯ ಇಲಾಖೆ ಜಾಗವಿದೆ. ಹೀಗಾಗಿ ಅವರಿಂದ ಅನುಮತಿ ಪಡೆದುಕೊಳ್ಳಬೇಕು. ರೇಣುಕಾಂಬೆ ದೇವಾಲಯ ಇರುವ ಸ್ಥಳ ಪುರಾತತ್ವ ಇಲಾಖೆ ವ್ಯಾಪ್ತಿಗೆ ಬರುತ್ತಿದೆ. ಅವರು ಅಲ್ಲಿ ಏನನ್ನೂ ಮಾಡಲು ಬಿಡುತ್ತಿಲ್ಲ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ಎನ್.ಹೇಮಂತ್, ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.