ಕ್ರೀಡೆಯಲ್ಲಿ ಪಾಲ್ಗೊಳ್ಳಲು ಆತ್ಮವಿಶ್ವಾಸ ಮುಖ್ಯ

nrp sports
ಎನ್.ಆರ್.ಪುರದಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಪಿ.ಕೆ.ಬಸವರಾಜ್, ಎಸ್.ಎಸ್.ಶಾಂತಕುಮಾರ್, ಪದ್ಮಾ ರಮೇಶ್, ಬೆಮ್ಮನೆ ಮೋಹನ್ ಇತರರಿದ್ದರು.
Published on

ಎನ್.ಆರ್.ಪುರ: ವಿದ್ಯಾರ್ಥಿಗಳು ಹಿಂಜರಿಕೆ ಇಲ್ಲದೆ ಆತ್ಮವಿಶ್ವಾಸ ಬೆಳೆಸಿಕೊಂಡು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಾಲೂಕು ಒಕ್ಕಲಿಗರ ಸಂಘದ ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜ್ ತಿಳಿಸಿದರು.

ಪಟ್ಟಣದ ಡಿಸಿಎಂಸಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಎನ್.ಆರ್.ಪುರ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿ, ಕ್ರೀಡೆಗಳಲ್ಲಿ ಪ್ರಯತ್ನ, ಉತ್ತೇಜನ ಬಹಳ ಮುಖ್ಯ. ಕ್ರೀಡೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವುದೇ ಮುಖ್ಯ ಎಂದರು.
ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಸೇವ್ಯಾನಾಯಕ್, ಮಾತನಾಡಿ, ಮಲೆನಾಡು ಭಾಗದಲ್ಲಿ ಮಳೆಯಿಂದ ಕ್ರೀಡೆಗೆ ಕೆಲವು ಸಮಯ ಅಡ್ಡಿಯಾಗುತ್ತದೆ. ಆದರೂ ವಿದ್ಯಾರ್ಥಿಗಳು ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದಾರೆ. ಸೆ.22ರಂದು ಮುತ್ತಿನಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ತಾಲೂಕು ಒಕ್ಕಲಿಗರ ಸಂಘದ ಖಜಾಂಚಿ ಲೋಕೇಶ್, ಶಿಕ್ಷಣದ ಜತೆಗೆ ಕ್ರೀಡೆಯೂ ಅತಿ ಮುಖ್ಯ. ಕ್ರೀಡೆಯಿಂದ ದೇಹ ಸದೃಢವಾಗುತ್ತದೆ. ವಿದ್ಯಾರ್ಥಿಗಳು ಲಭಿಸಿದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಎಲ್.ಎಂ.ಸತೀಶ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಭದ್ರಾ ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೆಮ್ಮನೆ ಮೋಹನ್, ಪ್ರಾಚಾರ್ಯೆ ಪದ್ಮಾ ರಮೇಶ್, ಮುಖ್ಯ ಶಿಕ್ಷಕ ಮಹಾವೀರ್, ದೇವಯಾನಿ, ಸುಪ್ರಿಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net