'ಇದು ರಾಜಕೀಯ ವಿಚಾರವಲ್ಲ'…ಮೋದಿಯವರನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕಿ

prathiba
Published on

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಹಿಮಾಚಲ ಪ್ರದೇಶ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ಮಂದಿರ ನಿರ್ಮಾಣದ ಉಪಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಎಕ್ಸ್' ನಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ಸಿಂಗ್, ಹಿಮಾಚಲ ಪ್ರದೇಶದ ಒಟ್ಟು ಜನಸಂಖ್ಯೆಯ 98 ಪ್ರತಿಶತದಷ್ಟು ಹಿಂದೂಗಳು ಇದ್ದಾರೆ ಮತ್ತು ನಾವೆಲ್ಲರೂ ಭಗವಾನ್ ರಾಮನಲ್ಲಿ ನಂಬಿಕೆ ಹೊಂದಿದ್ದೇವೆ. ನಮ್ಮ ಧರ್ಮವು ಪ್ರಗತಿಯಾಗಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದರು. ಕಾಂಗ್ರೆಸ್‌ನ ಉನ್ನತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ. ಬಿಜೆಪಿ ಚುನಾವಣಾ ಲಾಭಕ್ಕಾಗಿ ಮತ್ತು ಧರ್ಮವನ್ನು ಪ್ರತಿಪಾದಿಸಲು ಇದನ್ನು ರಾಜಕೀಯ ಯೋಜನೆಯನ್ನಾಗಿ ಮಾಡಿದೆ ಎಂದು ಪಕ್ಷ ಆರೋಪಿಸಿದೆ. ಅದು "ವೈಯಕ್ತಿಕ ವಿಷಯ" ಆಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ರಾಮಮಂದಿರ ನಿರ್ಮಾಣದ ಉಪಕ್ರಮವು ನಿಜವಾಗಿಯೂ ಶ್ಲಾಘನೀಯವಾಗಿದೆ. ಪತಿ ವೀರಭದ್ರ ಸಿಂಗ್ ದೇವರಲ್ಲಿ ಆಳವಾದ ನಂಬಿಕೆಯನ್ನು ಹೊಂದಿದ್ದರು ಮತ್ತು ರಾಜ್ಯದ ಅನೇಕ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿದರು ಎಂದು ಪ್ರತಿಭಾ ತಿಳಿಸಿದರು.
ನಾನು ಮತ್ತು ವಿಕ್ರಮಾದಿತ್ಯ ಸಿಂಗ್ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನವನ್ನು ಸ್ವೀಕರಿಸಿದ್ದೇವೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರತಿಭಾ ಹೇಳಿದರು.

ಇದು ರಾಜಕೀಯ ವಿಷಯವಲ್ಲ ಮತ್ತು ಹಿಮಾಚಲ ಪ್ರದೇಶದ ಕೆಲವೇ ಆಹ್ವಾನಿತರಲ್ಲಿ ನಾನೊಬ್ಬಳಾಗಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ ಮತ್ತು ನನಗೆ ಮತ್ತು ನನ್ನ ಕುಟುಂಬಕ್ಕೆ ಈ ಗೌರವವನ್ನು ನೀಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ತಿಗೆ ಧನ್ಯವಾದಗಳು ಎಂದು ಸಿಂಗ್ ತಿಳಿಸಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net