23ರಂದು ನೂತನ ಜನಪ್ರತಿನಿಧಿಗಳಿಗೆ ಅಭಿನಂದನೆ

C.S.Shadakshari
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ.
Published on

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಜೂ.23ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಜನಪ್ರತಿನಿಧಿಗಳಿಗೆ ಅಭಿನಂದನೆ, ಸರ್ಕಾರಿ ನೌಕರರ ನವೀಕೃತ ಭವನ ಉದ್ಘಾಟನೆ ಮತ್ತು ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ನವೀಕೃತ ಭವನವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್ ಪ್ರತಿಭಾ ಪುರಸ್ಕಾರ ನೆರವೇರಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಎಂಎಲ್‌ಸಿಗಳಾದ ಎಸ್.ಎಲ್.ಬೋಜೇಗೌಡ, ಡಾ. ಧನಂಜಯ ಸರ್ಜಿ, ಬಲ್ಕಿಷ್ ಬಾನು, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಪರಿಶಿಷ್ಟ ಜಾತಿ ಮತ್ತು ಪಂಗಡ ಬುಡಕಟ್ಟು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಜಿ.ಪಲ್ಲವಿ ಅವರನ್ನು ಅಭಿನಂದಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ ಮತ್ತು ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್ ವಿದ್ಯಾರ್ಥಿಗಳಿಗೆ ಪ್ರೇರಣಾ ನುಡಿಗಳನ್ನಾಡುವರು. ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಶ್ರೀನಿವಾಸ್, ಖಜಾಂಚಿ ಡಾ. ಎಸ್.ಸಿದ್ದರಾಮಣ್ಣ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಗೌರವಾಧ್ಯಕ್ಷ ಬಿ.ಎಚ್.ವೆಂಕಟೇಶಯ್ಯ, ಹಿರಿಯ ಉಪಾಧ್ಯಕ್ಷರಾದ ಎಂ.ವಿ.ರುದ್ರಪ್ಪ, ಎಸ್.ಬಸವರಾಜು, ಡಾ. ನೆಲ್ಕುದ್ರಿ ಸದಾನಂದಪ್ಪ ಅತಿಥಿಗಳಾಗಿರುವರು ಎಂದು ತಿಳಿಸಿದರು.
ಸಂಘದಿಂದ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದು, ಈ ಬಾರಿ 10 ಸಾವಿರ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುತ್ತಿದೆ. ಈಗಾಗಲೇ ಮೂರು ಜಿಲ್ಲೆಗಳಲ್ಲಿ ಪ್ರತಿಭಾ ಪುರಸ್ಕಾರ ಮುಕ್ತಾಯವಾಗಿದ್ದು, ಶಿವಮೊಗ್ಗದಲ್ಲಿ ಇದೀಗ ಹಮ್ಮಿಕೊಳ್ಳಲಾಗಿದೆ. ಶೇ.90ಕ್ಕಿಂತ ಅಧಿಕ ಅಂಕ ಪಡೆದ ಸರ್ಕಾರಿ ನೌಕರರ 400 ಮಕ್ಕಳನ್ನು ಗುರುತಿಸಿ ತಲಾ ಒಂದು ಸಾವಿರ ರೂ. ನಗದು, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.
ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷ ಡಾ. ಸಿ.ಎ.ಹಿರೇಮಠ, ಗೌರವಾಧ್ಯಕ್ಷ ಆರ್.ಪಾಪಣ್ಣ ಸುದ್ದಿಗೋಷ್ಠಿಯಲ್ಲಿದ್ದರು.

25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
ಸರ್ಕಾರಿ ನೌಕರರಿಗೆ ಸೀಮಿತವಾಗಿ ದೇಶದಲ್ಲೇ ಮೊದಲ ಸಮುದಾಯ ಭವನ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು, ಶೀಘ್ರವೇ ಶಿವಮೊಗ್ಗ ನಗರದ ಕೆಇಬಿ ವೃತ್ತ ಸಮೀಪದಲ್ಲಿ ಭವನ ಉದ್ಘಾಟನೆಗೊಳ್ಳಲಿದೆ. 1,500 ಆಸನ, 150 ಕಾರ್ ಪಾರ್ಕಿಂಗ್ ವ್ಯವಸ್ಥೆ, 25ರಿಂದ 30 ಕೊಠಡಿಗಳನ್ನು ಮೊದಲ ಹಂತದಲ್ಲೇ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ 100ಕ್ಕೂ ಅಧಿಕ ಕೊಠಡಿಗಳನ್ನು ನಿರ್ಮಿಸುವ ಮೂಲಕ ಸುಸಜ್ಜಿತ ಭವನ ನಿರ್ಮಾಣ ಮಾಡಲಾಗುವುದು. 25 ಕೋಟಿ ರೂ. ವೆಚ್ಚದಲ್ಲಿ ಭವ್ಯವಾದ ಭವನ ನಿರ್ಮಾಣಗೊಳ್ಳುತ್ತಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net