

ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನ;ಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದದ್ದು, ಇದನ್ನು ಖಂಡಿಸಿ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು, ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಆರಂಭಗೊಂಡ ರಾಜಭವನ ಚಲೋ ಪ್ರತಿಭಟನೆಯಲ್ಲಿ ಆಡಳಿತ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿದರು.
ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದಂತೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭೀಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟಾರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸುತ್ತಿದ್ದಾರೆ.