

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವ್, ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಮಂಗಳೂರು- ಉಡುಪಿ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿ ಸಮಿತಿಗಳನ್ನು ನೇಮಕ ಮಾಡಿದೆ.
ಈ ಸಮಿತಿಯು ತಕ್ಷಣವೇ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಶಿಾರಸು ಮಾಡಲು ಹಾಗೂ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಸೂಕ್ತ ಕ್ರಮಕೈಗೊಳ್ಳುವ ಪ್ರಕ್ರಿಯೆಯಲ್ಲಿ ಆ ಕ್ಷೇತ್ರ ವ್ಯಾಪ್ತಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ವರದಿ ಕಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಮಿತಿ ರಚಿಸಲಾಗಿದೆ. ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಇಕ್ಬಾಲ್ ಹುಸೇನ್, ಪರಿಷತ್ ಸದಸ್ಯ ಪುಟ್ಟಣ್ಣ, ಎಸ್.ರವಿ, ಡಿಸಿಸಿ ಅಧ್ಯಕ್ಷ ಗಂಗಾಧರ್ ಸಮಿತಿ ಸದಸ್ಯರಾಗಿದ್ದಾರೆ.
ಶಿಗ್ಗಾವ್ ಕ್ಷೇತ್ರಕ್ಕೆ ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಮಿತಿ ರಚಿಸಲಾಗಿದೆ. ಅದರಲ್ಲಿ ಸಚಿವ ಶಿವಾನಂದ ಪಾಟೀಲ್, ಸಂತೋಷ್ ಲಾಡ್, ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿ ಮತ್ತಿಬ್ಬರು ಇದ್ದಾರೆ.
ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಜಮೀರ್ ಅಹ್ಮದ್ ಅಧ್ಯಕ್ಷರಾಗಿದ್ದು, ಸಂಸದ ತುಕಾರಾಂ, ಶಾಸಕ ಬಿ.ನಾಗೇಂದ್ರ, ಎನ್.ಟಿ.ಶ್ರೀನಿವಾಸ್, ಪಿ.ಟಿ.ಪರಮೇಶ್ವರ ನಾಯ್ಕ, ನಾಸೀರ್ ಹುಸೇನ್, ಶಿವಯೋಗಿ ಸದಸ್ಯರಾಗಿದ್ದಾರೆ.
ದಕ್ಷಿಣ ಕನ್ನಡ- ಉಡುಪಿ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಸ್ತುವಾರಿ ಸಮಿತಿ ಹೊಣೆಯನ್ನು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ವಹಿಸಲಾಗಿದೆ. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಶಾಸಕ ಅಶೋಕ್ ರೈ, ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್ ಮತ್ತಿತರರು ಇದ್ದಾರೆ.