

ನವದೆಹಲಿ: 2008ರಲ್ಲಿ ಮಹಾರಾಷ್ಟ್ರ ಮೂಲದ ರೈತ ಮಹಿಳೆ ಕಲಾವತಿ ಬಂಡೂರ್ಕರ್ರನ್ನು ಸಂಸದ ರಾಹುಲ್ ಗಾಂಧಿ ಭೇಟಿ ಮಾಡಿರುವ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಸ್ಪೀಕರ್ ಓಂ ಬಿರ್ಲಾರಿಗೆ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದು, ಈ ಕುರಿತು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಷಾ ರಾಜಕೀಯವಾಗಿ ರಾಹುಲ್ ಗಾಂಧಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಎದುರಿಸಿದ 13 ವೈಫಲ್ಯಗಳನ್ನು ಪಟ್ಟಿ ಮಾಡಿ ಹೇಳುತ್ತಿದ್ದರು. ಮಹಾರಾಷ್ಟ್ರದ ರೈತ ಮಹಿಳೆ ಕಲಾವತಿರನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದ ವಿಚಾರವನ್ನೂ ಪ್ರಸ್ತಾಪಿಸಿ ಕುಟುಕಿದ್ದರು.
ಕಲಾವತಿ ಅವರಿಗೆ ಮನೆ ಕಟ್ಟಿಸಿ ಕೊಟ್ಟಿದ್ದು, ಮೋದಿ ಸರ್ಕಾರ. ವಿವಿಧ ಸರ್ಕಾರಿ ಯೋಜನೆಗಳ ಲಾಭವನ್ನೂ ಅವರು ನಮ್ಮ ಆಡಳಿತದಲ್ಲಿ ಪಡೆದುಕೊಂಡಿದ್ದಾರೆ ಎಂದು ಅಮಿತ್ ಷಾ ತಮ್ಮ ಭಾಷಣದಲ್ಲಿ ಹೇಳಿದ್ದರು. ಮಹಾರಾಷ್ಟ್ರದ ವಿದರ್ಭದಲ್ಲಿ ಕೃಷಿ ಬಿಕ್ಕಟ್ಟಿನಿಂದ ಕಲಾವತಿ ಅವರ ಪತಿ 2008ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಗುಲ್ ಗಾಂಧಿ ಸಾಂತ್ವ ಹೇಳಿ ಪರಿಹಾರದ ಚೆಕ್ ವಿತರಿಸಿದ್ದರು.
ಸದನವನ್ನು ಉದ್ದೇಶಿಸಿ ಮಾತನಾಡುವ ವೇಳೆ ಅಮಿತ್ ಷಾ ಸತ್ಯ ಹಾಗೂ ನಿಖರ ಮಾಹಿತಿಯನ್ನೂ ಮುಚ್ಚಿಡುವ ಮೂಲಕ ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಆದ್ದರಿಂದ ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಮಂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.