ಜನರನ್ನು ವಂಚಿಸುತ್ತಿದೆ ಕಾಂಗ್ರೆಸ್ ಸರ್ಕಾರ

IMG-20240805-WA0000
ನಂಜನಗೂಡು ಮಾಜಿ ಶಾಸಕ ಬಿ.ಹರ್ಷವರ್ಧನ್ ಬಿಜೆಪಿ ಕಾರ್ಯಕರ್ತರ ಜತೆಗೂಡಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಪಾದಯಾತ್ರೆಯಲ್ಲಿ ಭಾನುವಾರ ಭಾಗಿಯಾದರು.
Published on

ನಂಜನಗೂಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಕಲ್ಯಾಣದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರು, ಶೋಷಿತರು ಹಾಗೂ ಹಿಂದುಳಿದವರ ಅನುದಾನವನ್ನು ಲೂಟಿ ಮಾಡುವ ಮೂಲಕ ಜನರನ್ನು ವಂಚಿಸುತ್ತಿದೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಆರೋಪಿಸಿದರು.


ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಆಯೋಜಿಸಿರುವ ಬೆಂಗಳೂರಿನಿಂದ ಮೈಸೂರಿನವರೆಗಿನ ಪಾದಯಾತ್ರೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಜತೆಗೂಡಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾಗಿಯಾಗಿ ಮಾತನಾಡಿದರು.


ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಹಗರಣ ಹಾಗೂ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ ದುರ್ಬಳಕೆ ಮೂಲಕ ಸಿದ್ದರಾಮಯ್ಯ ಸರ್ಕಾರದ ನೈಜಬಣ್ಣ ಬಯಲಾಗಿದೆ. ಇನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶೇ.50:50ರ ಅನುಪಾತದಲ್ಲಿ ಪಡೆದುಕೊಂಡಿರುವ ನಿವೇಶನಗಳ ವಿಚಾರದಲ್ಲಿ ಸಾಕಷ್ಟು ಲೋಪಗಳು ಜರುಗಿದ್ದು ಮಂತ್ರಿಗಳು ಇದೀಗ ಸಮರ್ಥನೆಗೆ ಇಳಿದಿದ್ದಾರೆ. ಆದ್ದರಿಂದ ರಾಜ್ಯಪಾಲರು ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿರುವುದು ಸರಿಯಾಗಿದೆ. ಇನ್ನು ಮೈತ್ರಿ ಪಾದಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಜನರು ಅತ್ಯುತ್ಸಾಹದಿಂದ ಪಾಲ್ಗೊಂಡು ಆಡಳಿತಾರೂಢ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net