

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳು ಹಾಗೂ ಕೊಲೆಗಳನ್ನು ರಾಜ್ಯ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರ ಒಂದು ಕೋಮನ್ನು ಓಲೈಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟವನ್ನ ಸಹ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲೇ ಇಲ್ಲ. ಎನ್‌ಐಎ ತನಿಖೆ ನಡೆಸಿ ಕೋಲ್ಕತ್ತಾ ಹಾಗೂ ತಮಿಳುನಾಡಿನಲ್ಲಿ ಬಂಧಿಸಿದೆ. ‘ಐಎನ್‌ಡಿಐಎ’ ಮೈತ್ರಿಕೂಟದ ರಾಜ್ಯಗಳಲ್ಲೇ ನಮಗೆ ಸೂಕ್ತ ಆಶ್ರಯ ಸಿಗಬಹುದು ಎಂಬ ಭಾವನೆಯೊಂದಿಗೆ ಆರೋಪಿಗಳು ಈ ಎರಡು ರಾಜ್ಯಗಳಲ್ಲಿ ಅಡಗಿಕೊಂಡಿದ್ದರು. ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಅಮಾಯಕರ ಹತ್ಯೆಗಳು ನಡೆಯುತಿದ್ದು, ಜನರಿಗೆ ರಕ್ಷಣೆ ಇಲ್ಲದಂ ತಾಗಿದೆ. ಜನರ ರಕ್ಷಣೆಯನ್ನು ರಾಜ್ಯ ಸರ್ಕಾರ ಸಂಪೂರ್ಣ ಕಡೆಗಣಿಸಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಈ ಬಾರಿಯ ಚುನಾವಣೆಯನ್ನು ಬಿಜೆಪಿ ಅಭಿವೃದ್ಧಿಯ ಆಧಾರದ ಮೇಲೆ ಎದುರಿಸುತ್ತಿದ್ದೇವೆ. 10 ವರ್ಷಗಳ ಹಿಂದೆ ದೇಶ ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು. ಆದರೆ, ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶ ಹಲವಾರು ಅಭಿವೃದ್ಧಿ ಕಂಡಿದ್ದು, ದೇಶದ ಆರ್ಥಿಕತೆಯೂ ಉತ್ತಮಗೊಂಡಿದೆ ಎಂದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಮಾತನಾಡಿ, ಒಂದು ಕೋಮಿನವರನ್ನು ರಾಜ್ಯ ಸರ್ಕಾರ ಓಲೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅತ್ಯಾಚಾರ, ಕೊಲೆಗಳು ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ನಮ್ಮ ಹೆಣ್ಣು ಮಕ್ಕಳನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕು ಎಂದರು.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವ ಮೂಲಕ ಹಿಂದುಳಿದ ವರ್ಗಗಳಿಗೆ ಖಾಲಿ ಚೊಂಬು ನೀಡಿದೆ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ನಗರ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಗ್ರಾಮಾಂತರ ವಕ್ತಾರ ದಯಾನಂದ ಪಾಟೀಲ್, ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್ ಹಾಗೂ ಇತರರು ಇದ್ದರು.