ಪ್ರಗಾಢ ನಿದ್ದೆಯಿಂದ ಎಚ್ಚೆತ್ತ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ವ್ಯಂಗ್ಯ

R Ashoka19may2021_1
Published on

ಬೆಂಗಳೂರು: ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿ ರಾಜ್ಯಾದ್ಯಂತ ರೈತರು ಸಂಕಷ್ಟ ಎದುರಿಸುತ್ತಿರುವುದನ್ನ ವಿಪಕ್ಷಗಳು ಗಮನಕ್ಕೆ ತಂದ ಮೇಲೆ ಪ್ರಗಾಢ ನಿದ್ದೆಯಿಂದ ಎದ್ದಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ನಿನ್ನೆ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ತಿವಿದಿದ್ದಾರೆ.

ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ, ಈ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರ್ಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು.

ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ ಎಂದು ಆರ್.ಅಶೋಕ್ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net