ರೈತಪರ ನಿಲುವು ಪ್ರದರ್ಶಿಸದ ಕಾಂಗ್ರೆಸ್ ಸರ್ಕಾರ

H.R. Basavarajappaa
ಎಚ್.ಆರ್.ಬಸವರಾಜಪ್ಪ, ರೈತ ಸಂಘದ ಅಧ್ಯಕ್ಷ
Published on

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 14 ತಿಂಗಳು ಕಳೆದಿದ್ದರೂ ಚುನಾವಣೆಯಲ್ಲಿ ರೈತರ ಪರವಾಗಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರೈತರ ಪರವಾದ ನಿಲುವುಗಳನ್ನು ಪ್ರದರ್ಶಿಸುತ್ತಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿ ಯೋಜನೆ ಜಾರಿ ವಿಷಯದಲ್ಲಿ ಯಾವುದೇ ಪ್ರಗತಿಯಾಗಿಲ್ಲ. ರಾಜ್ಯ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದಿಲ್ಲ. ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕೃಷಿ ಕಾಯ್ದೆ ತಿದ್ದುಪಡಿಯಿಂದ ಕೃಷಿ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಮುಂದೆ ರೈತರು ಕೃಷಿ ಜಮೀನನ್ನು ಮಾರುವ ಸನ್ನಿವೇಶ ಸೃಷ್ಟಿಯಾಗಲಿದೆ. ಬಿತ್ತನೆ ಬೀಜದ ಬೆಲೆ ಏರಿಕೆಯಾಗಿದೆ. ಕನಿಷ್ಟ ಬೆಂಬಲ ಬೆಲೆಗೆ ಇನ್ನು ಶಾಸನಬದ್ಧತೆ ಸಿಕ್ಕಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಗಳು ಪರಿಹಾರವಾಗಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ವಿಮಾ ಕಂಪನಿಗಳು ರೈತರಿಗೆ ಮೋಸ ಮಾಡುತ್ತಿವೆ. ಕೆಲ ಬ್ಯಾಂಕ್‌ಗಳು ಹಾಲಿನ ಸಹಾಯ ಧನ, ಬರಪರಿಹಾರ, ವಿಧವಾ ವೇತನ, ಪಿಎಂ ಕಿಸಾನ್ ಸಮ್ಮಾನ್ ಸಹಾಯ ಧನವನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿವೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ರೈತರ ಪಹಣಿ, ಮ್ಯುಟೇಷನ್, ಸರ್ವೇ ಹದ್ದು ಬಸ್ತು, ಪೋಡಿ, ಮುದ್ರಾಂಕ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದರು.
ರೈತ ಸಂಘದ ಪ್ರಮುಖರಾದ ಕೆ.ರಾಘವೇಂದ್ರ, ಟಿ.ಎಂ.ಚಂದ್ರಪ್ಪ, ಜ್ಞಾನೇಶ್, ಜಗದೀಶ್, ಹಿಟ್ಟೂರು ರಾಜು, ಸಿ.ಚಂದ್ರಪ್ಪ, ಹಾರ‌್ನಹಳ್ಳಿ ರುದ್ರೇಶ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net