

ಶಿಕಾರಿಪುರ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯೇರಿಸಿ ಜನಸಾಮಾನ್ಯರ ಬದುಕು ದುಸ್ತರವಾಗುವಂತೆ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಬಂದಾಗಿನಿಂದ ಬೆಲೆಯೇರಿಕೆ ಬಿಸಿಯಿಂದ ಜನರು ಕಂಗಾಲಾಗಿದ್ದಾರೆ. ಈಗ ಪೆಟ್ರೋಲ್, ಡೀಸೆಲ್, ಸಿಎನ್‌ಜಿ, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಯನ್ನೂ ಜಾಸ್ತಿ ಮಾಡಿದೆ. ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು. ಹವಾಮಾನ ವೈಪರೀತ್ಯ, ಅತಿವೃಷ್ಟಿ, ಅನಾವೃಷ್ಟಿಗಳಿಂದ ರೈತರ ಬದುಕು ದುಸ್ತರವಾಗುತ್ತಿದೆ. ಸರಿಯಾದ ಬೆಳೆ ಮತ್ತು ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಈ ರೀತಿ ಬೆಲೆ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳದ ಶಿವರಾಮ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜು ನಾಯಕ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹುಲ್ಮಾರ್ ಶಿವು, ಪ್ರಮುಖರಾದ ರಾಘವೇಂದ್ರ ನಾಯ್ಕ್, ಭಂಡಾರಿ ಮಾಲತೇಶ್ ಇತರರಿದ್ದರು.