

ಬೆಂಗಳೂರು: ರಾಜ್ಯದ ಶೇ.25 ಶಿಕ್ಷಕರಿಗೆ ವರ್ಗಾವಣೆಯಲ್ಲಿ ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಯ ನೂತನ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಮತ್ತು ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲೇನಿದೆ?: ತಾಲೂಕು ಹಂತದಲ್ಲಿ ಮಂಜೂರಾಗಿರುವ ಹುದ್ದೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ.29 ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಡಿ.2ರಂದು ಕೌನ್ಸೆಲಿಂಗ್ ಪ್ರಕ್ರಿಯೆ ಶುರವಾಗಲಿದೆ. ಹೊಸದಾಗಿ ಅರ್ಜಿ ಸಲ್ಲಿಸಿರುವ ಶಿಕ್ಷಕರಿಗೆ 2022ರ ಜ.19ರಂದು ಪ್ರಕ್ರಿಯೆ ಆರಂಭಗೊಳ್ಳಲಿದೆ. ಈಗಾಗಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಿರುವ ಶಿಕ್ಷಕರಿಗೆ ಮೊದಲು ಕೌನ್ಸೆಲಿಂಗ್ ನಡೆಸಲಾಗುತ್ತದೆ. ಅಂತರ್ ವಿಭಾಗೀಯ, ಜಿಲ್ಲಾ ಮತ್ತು ವಿಭಾಗೀಯ ಮಟ್ಟದಲ್ಲಿ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಸುವಂತೆ ತಿಳಿಸಿದೆ.
ಕೌನ್ಸೆಲಿಂಗ್ ಮುಂದೂಡಿತ್ತು: ಶಿಕ್ಷಕರ ಬೇಡಿಕೆಯಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಬದಲು ಇಲಾಖೆಯಲ್ಲಿ ಮಂಜೂರಾಗಿರುವ ಹುದ್ದೆಗಳ ಆಧಾರದ ಮೇಲೆ ವರ್ಗಾವಣೆಗೆ ಅವಕಾಶ ನೀಡಲು ಇಲಾಖೆ ಸಮ್ಮತಿಸಿತ್ತು. ಇದಕ್ಕೆ ಅಗತ್ಯ ತಂತ್ರಾಂಶ ಅಭಿವೃದ್ಧಿಪಡಿಸಲು ಕಾಲಾವಕಾಶ ಬೇಕಿದ್ದರಿಂದ ನ.24ರಂದು ಆರಂಭವಾಗಬೇಕಿದ್ದ ಕೌನ್ಸೆಲಿಂಗ್ ಅನ್ನು ತಾತ್ಕಾಲಿಕವಾಗಿ ಮುಂದೂಡಿತ್ತು.