ಜಾತಿ ವ್ಯವಸ್ಥೆ ತೊಲಗಿಸಲು ಸಂವಿಧಾನ ಅಸ್ತ್ರ: ಸಿಎಂ ಸಿದ್ದರಾಮಯ್ಯ

IMG-20240224-WA0008
Published on

ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಸಮಾನತೆ ಸೃಷ್ಟಿಸಿದ ಜಾತಿ ವ್ಯವಸ್ಥೆ ತೊಲಗಿಸಲು ಸಂವಿಧಾನ ಅಸ್ತ್ರವಾಗಿದೆ. ಸಮಾನತೆ ಸ್ಥಾಪಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಂವಿಧಾನದ ಅಮೃತ ಮಹೋತ್ಸವ ನಿಮಿತ್ತ ಅರಮನೆ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಸಂವಿಧಾನ ಮತ್ತು ಏಕತೆ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶವನ್ನು ಕಾಡುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರವಿದೆ ಎಂದು ಹೇಳಿದರು.

ಸಂವಿಧಾನದ ವಿರುದ್ಧ ಅಪಪ್ರಚಾರ

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿವೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ  ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ  ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ  ತುಮಕೂರು ಜಿಲ್ಲೆ, ದಾವಣಗೆರೆ,  ಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ  ವಿತರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ , ಸಚಿವ ಪ್ರಿಯಾಂಕ ಖರ್ಗೆ ಶಾಸಕ ಸೋಮಶೇಖರ್,ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net