

ಹನೂರು: ಮಕ್ಕಳಲ್ಲಿ ಸಾಮರ್ಥ್ಯ ಬೆಳೆಸುವಲ್ಲಿ ನಿಟ್ಟಿನಲ್ಲಿ ಅಕ್ಷರ ಫೌಂಡೇಷನ್ ಶಾಲೆಗಳಲ್ಲಿ ಪಠ್ಯಕ್ರಮ ಅನುಷ್ಠಾನಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಹೇಳಿದರು.
ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಅಕ್ಷರ ಫೌಂಡೇಷನ್ ಹಾಗೂ ಆರ್‌ಎಸ್‌ಎ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಸ್ಟಿಮ್ ಅರಿವು ಹಾಗೂ ಎಫ್‌ಎಲ್‌ಎನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚಾಮರಾಜನಗರ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿದಾಗ ಸಂಪನ್ಮೂಲ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣವನ್ನು ಹೊಂದಿರುವ ಹನೂರು ಕೂಡ ಹಿಂದುಳಿದ ತಾಲೂಕಾಗಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಆದರೆ, ಕೆಲವು ಮಕ್ಕಳಲ್ಲಿ ಪ್ರಶ್ನೆಪತ್ರಿಕೆ ಓದಿ ಅರ್ಥೈಸಿಕೊಳ್ಳಲು ಕೂಡ ಸಾಧ್ಯವಾಗುತ್ತಿಲ್ಲ. ಕೆಲವು ಸಂಸ್ಥೆಗಳು ಮಕ್ಕಳ ಶಿಕ್ಷಣ ಉತ್ತೇಜನಕ್ಕೆ ಸಹಕಾರ ನೀಡುತ್ತಾ ಬಂದಿವೆ. ಇದರಲ್ಲಿ ರಾಜ್ಯದಲ್ಲಿ ಶಿಕ್ಷಣಕ್ಕೆ ಪೂರಕವಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಮಕ್ಕಳ ಭವಿಷ್ಯಕ್ಕೆ ಹೆಚ್ಚಿನ ಒತ್ತು ನೀಡಿರುವ ಅಕ್ಷರ ಫೌಂಡೇಷನ್ ಈ ಕಾರ್ಯಕ್ರಮವನ್ನು ಅನುಷ್ಠಾನಗಳಿಸುತ್ತಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಜಿಪಂ ಸಿಇಒ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
77 ಶಾಲೆಗಳಲ್ಲಿ ಅನುಷ್ಟಾನ: ಅಕ್ಷರ ಫೌಂಡೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಒಡೆಯರ್ ಮಾತನಾಡಿ, ಮಕ್ಕಳ ಶಿಕ್ಷಣ ಉತ್ತಮ ಪಡಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ರೂಪುಗೊಳಿಸಲಾಗುತ್ತಿದೆ. ಸಮೀಕ್ಷೆಯ ಪ್ರಕಾರ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಪ್ರವೇಶಿಸುವ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಗಣಿತದ ಬಗ್ಗೆ ಅರಿವು ಇಲ್ಲದಿರುವುದು ಬೆಳಕಿಗೆ ಬಂದಿದೆ. ಜತೆಗೆ ಕನ್ನಡ ಭಾಷೆಯ ಬಳಕೆ ಕೊರತೆ ಕೂಡ ಇದೆ. ಮಕ್ಕಳಲ್ಲಿ ಮೂಲ ಸಾಮರ್ಥ್ಯ ಬೆಳೆಸುವ ನಿಟ್ಟಿನಲ್ಲಿ ಆರ್‌ಎಸ್‌ಎ ಸಹಯೋಗದಲ್ಲಿ ತಾಲೂಕಿನ 77 ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ. ಶೇಕಡ 100ರಷ್ಟು ಗುರಿ ಹೊಂದಲು ನಿರ್ಧರಿಸಲಾಗಿದೆ. ಆದ್ದರಿಂದ ಶಿಕ್ಷಕರು ಈ ಬಗ್ಗೆ ಅಗತ್ಯ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಗುರುಲಿಂಗಯ್ಯ, ಫೌಂಡೇಷನ್ ನಿರ್ದೇಶಕ ಧೀರಜ್ ಕೊರಾರಿಯಾ, ಕಾರ್ಯದರ್ಶಿ ಶ್ವೇತಾ ಸಕ್ಸೆನಾ, ಆರ್‌ಎಸ್‌ಎ ವ್ಯವಸ್ಥಾಪಕ ಮಲ್ಲಿಕಾರ್ಜುನ, ವಿಘ್ನೇಶ್ ಇತರರು ಇದ್ದರು.