

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ.
ಶನಿವಾರ ತಲೆ ನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಕೊವಿಡ್-19 ಟೆಸ್ಟ್ಗೆ ಒಳಗಾಗಿದ್ದೆ. ಇವತ್ತು ವರದಿ ಬಂದಿದ್ದು, ಕೊವಿಡ್-19 ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ನನ್ನ ಕ್ಷೇತ್ರಗಳ ಕಾರ್ಯದಲ್ಲಿ ತೊಡಗಿಕೊಂಡಿದ್ದೆ. ಕರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಹಾಗಾಗಿ ಸೋಂಕು ತಗುಲಿದೆ. ನನ್ನಲ್ಲಿ ರೋಗನಿರೋಧಕ ಶಕ್ತಿ ಪ್ರಬಲವಾಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಖಂಡಿತ ಬೇಗ ಗುಣವಾಗುತ್ತೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ನಾನು ಭೇಟಿ ಕೊಟ್ಟಿರುವ ಸ್ಥಳ, ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕರೊನಾ ಲಕ್ಷಣಗಳು ಕಂಡುಬಂದಿದ್ದರೆ ಕೂಡಲೇ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.