

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಡೆಂಘೆ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕಳೆದ ಜುಲೈನಲ್ಲಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿದ್ದ ಅರ್ಜಿ ಗುರುವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯದಲ್ಲಿ ಡೆಂಘೆ ಸಂತ್ರಸ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಹೊಸ ಅಂಕಿ ಅಂಶಗಳ ಪಟ್ಟಿಯನ್ನು ಕೋರ್ಟ್ ಮೆಮೊ ಮೂಲಕ ಸಲ್ಲಿಸಲಾಗುವುದು. ಡೆಂಘೆಗೆ ತುತ್ತಾದವರಿಗೆ ಚಿಕಿತ್ಸೆ ನೀಡಿ ಗುಣಪಡಿಸುವ ಕ್ರಮಗಳ, ಡೆಂಘೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು.
ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣ ಕುರಿತ ತೀರ್ಪು ಕಾಯ್ದಿರಿಸಿತು.