ಕೋವಿಡ್ ಬಗ್ಗೆ ನಿರ್ಲಕ್ಷ್ಯ ಬೇಡ, ಜಾಗೃತಿ ಅಗತ್ಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅಭಿಮತ

06-07-rama-redcross
Published on

ರಾಮನಗರ: ಕೋವಿಡ್ ಬಗ್ಗೆ ನಿರ್ಲಕ್ಷ್ಯ ವಹಿಸದೆ ಜಾಗೃತಿಯಿಂದ ಇರುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ತಿಳಿಸಿದರು.

ನಗರದ ಐಜೂರಿನಲ್ಲಿರುವ ಕಕ್ಕುಲ ಮಹದೇವಮ್ಮ ಮಾರಮ್ಮ ದೇವಾಲಯದ ಆವರಣದಲ್ಲಿ ಮಂಗಳವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ್ದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ದಿನಸಿ ಹಾಗೂ ಮೆಡಿಕಲ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಲಾಕ್‌ಡೌನ್ ಸಮಯದಲ್ಲಿ ಕೋವಿಡ್ ಸಾಕಷ್ಟು ಜನರ ಜೀವ ಹಿಂಡಿದೆ. ಇದರಿಂದ ಹಲವರು ಉದ್ಯೋಗ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಅದರ ಕುರಿತು ಅರಿವು ಮೂಡಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ನಿಯಮಾವಳಿಗಳನ್ನು ಎಲ್ಲರೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾ ಕಾರ್ಮಿಕಾಧಿಕಾರಿ ಶೇಖರ ಎಸ್. ಗಡದ್ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಮಿತಿ ವತಿಯಿಂದ ದಿನಸಿ ಹಾಗೂ ಮೆಡಿಕಲ್ ಕಿಟ್ ವಿತರಣೆ ಮಾಡುವ ಮೂಲಕ ಸಹಾಯ ಹಸ್ತ ಚಾಚಿರುವುದು ಶ್ಲಾಘನೀಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೇಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ 2000 ರೂ.ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ನ ಮೊತ್ತವನ್ನು ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಜು.31 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

100 ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ದಿನಸಿ ಹಾಗೂ ಮೆಡಿಕಲ್ ಕಿಟ್‌ಗಳನ್ನು ವಿತರಿಸಲಾಯಿತು.

ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯ ವಿ. ಬಾಲಕೃಷ್ಣ, ಜಿಲ್ಲಾ ಕಾರ್ಯದರ್ಶಿ ಕೆ.ಎಚ್. ಚಂದ್ರಶೇಖರಯ್ಯ, ಖಜಾಂಚಿ ಎಂ. ಪರಮಶಿವಯ್ಯ, ಯೂತ್ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಎಸ್. ರುದ್ರೇಶ್ವರ, ಲಯನ್ಸ್ ಕ್ಲಬ್ ಅಧ್ಯಕ್ಷ ಸಾಹುಕಾರ್ ಆಮ್ಜದ್, ಅಮೃತ ವಿಕಲಚೇತನ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್ ಮತ್ತಿತರರು ಇದ್ದರು.

---------------------------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net