

ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ(Covid is illegal; those who eat money will not be spared) ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D K Shivakumar)ತಿಳಿಸಿದರು.
ನ್ಯಾ. ಮೈಕಲ್ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತ ಉಪಸಮಿತಿ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಕುನ್ಹಾ ವರದಿ ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದರು.
ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದು ಹೇಳಿದರು.
ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ ಎಂದು ಹೇಳಿದರು.
ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 84 ಲಕ್ಷ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, 502 ಕೋಟಿ ಬಿಲ್ ಮಾಡಿದ್ದಾರೆ. 400 ಕೋಟಿ ಪಾವತಿ ಮಾಡಲಾಗಿದೆ. ಕಿದ್ವಾಯಿ ಸಂಸ್ಥೆಯೊಂದರಲ್ಲೇ 24 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು ಹೇಳಿದ್ದಾರೆ. ತಾಂತ್ರಿಕವಾಗಿ ಸಮರ್ಥವಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. 146 ಕೋಟಿ ಬಿಲ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 24 ಲಕ್ಷ ಜನರಿಗೆ ಒಂದೇ ಕಡೆ ಪರೀಕ್ಷೆ ಎಂದರೆ ಅಲ್ಲಿ ಎಷ್ಟು ಜನದಟ್ಟಣೆ, ಸರದಿ ಸಾಲು ಇರಬೇಕು ಎಂದು ವ್ಯಂಗ್ಯವಾಡಿದರು.
ಈ ವರದಿಗಳನ್ನು ಪರಿಶೀಲಿಸಿ ನಮಗೆ ಮಾರ್ಗದರ್ಶನ ನೀಡಲು ನಿವೃತ್ತ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.
ಇದು ರಾಜಕೀಯ ಪಿತೂರಿ ಎಂದು ಮಾಜಿ ಆರೋಗ್ಯ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡರಂತೆ. ನಾನು ಅವರ ಸುದ್ದಿಯನ್ನೇ ಮಾತನಾಡಿಲ್ಲ. ಅವರೇಕೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಮೊದಲ ಸಭೆಯಲ್ಲಿ ಯಾರ ಮೇಲಾದರೂ ಎ್ಐಆರ್ ದಾಖಲಿಸುವ ಸೂಚನೆ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ಅಧಿಕಾರಿಗಳು ತಮ್ಮ ಕೆಲಸ ಮಾಡಲಿದ್ದಾರೆ. ಆ ಪ್ರಕ್ರಿಯೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಬಿಜೆಪಿ ಸರ್ಕಾರ ಹೆಣದ ಮೇಲೆ ಹಣ ಮಾಡಿದೆ ಎಂದು ನಾವೇ ವಿಧಾನಸಭೆಯಲ್ಲಿ ಭಾಷಣ ಮಾಡಿದ್ದೇವೆ. ಜನ ಇವುಗಳನ್ನು ನೋಡಿ ರೋಸಿಹೋಗಿದ್ದಾರೆ. ಈಗ ನಾನು ನಿಮಗೆ ಕೇವಲ ಎರಡು ಉದಾಹರಣೆಯನ್ನಷ್ಟೇ ಮಾತ್ರ ಹೇಳಿದ್ದೇವೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಗುಡುಗಿದರು.
ಒಪ್ಪಂದದ ವಿಚಾರವಾಗಿ ಯಾರೊಬ್ಬರು ಚರ್ಚೆ ಮಾಡಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸಿಎಂ ಅಧಿಕಾರ ಹಂಚಿಕೆ ವಿಚಾರವಾಗಿ ಒಪ್ಪಂದ ಆಗಿರುವುದು ನಿಜ ಎಂಬ ಮುನಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಯಾವುದೇ ಸೂತ್ರ ಇಲ್ಲ. ಮುಖ್ಯಮಂತ್ರಿಗಳಿಗೆ ಕೆಲವು ಜವಾಬ್ದಾರಿ ವಹಿಸಿದ್ದು, ನನಗೆ ಕೆಲವು ಜವಾಬ್ದಾರಿ ವಹಿಸಿದ್ದಾರೆ. ನಾವು ನಮ್ಮ ಕೆಲಸ ಮಾಡುತ್ತಿದ್ದು, ಈ ಒಪ್ಪಂದ ಸೂತ್ರದ ಬಗ್ಗೆ ಯಾರೂ ಮಾತನಾಡುವ ಅವಶ್ಯಕತೆ ಹಾಗೂ ಸಂದರ್ಭವಿಲ್ಲ. ಸಿಎಂ ಹೇಳಿದ್ದೆ ಅಂತಿಮ ಎಂದು ನಾನು ಹೇಳಿದ್ದೇನೆ ಎಂದು ಶಿವಕುಮಾರ್ ಹೇಳಿದರು.