ಕಡೆಗೂ MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ​! ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ವಿಜಯವಾಣಿ - 2024-10-21T163509.291
Published on

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ (MLC) ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅ.21) ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.

ಇನ್ನು ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ. ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ತಮ್ಮ ನಿರ್ಧಾರವನ್ನು ಬಹಿರಂಗವಾಗಿ ತಿಳಿಸಿದ್ದಾರೆ. ಪರಿಷತ್​ನ ಸಭಾಪತಿಗೆ ರಾಜೀನಾಮೆ ಪತ್ರ ಕೊಟ್ಟ ಬೆನ್ನಲ್ಲೇ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣಾ ಕಣಕ್ಕಿಳಿಯಲಿದ್ದೇನೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಸಿ.ಪಿ. ಯೋಗೇಶ್ವರ್​ ಅವರು ಕಾಂಗ್ರೆಸ್​ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡಿತ್ತು. ಬಿಜೆಪಿ ಅಥವಾ ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ಯೋಗೇಶ್ವರ್​ ವ್ಯಕ್ತಪಡಿಸಿದ್ದರು. ಆದರೆ, ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡಲು ಒಪ್ಪದ ಜೆಡಿಎಸ್​, ನಿಖಿಲ್​ ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಚುನಾವಣಾ ಕಣಕ್ಕೆ ಇಳಿಸುವ ಸಾಧ್ಯತೆ ಎಂದ ಕಾರಣ ಇದೀಗ ಯೋಗೇಶ್ವರ್​ ತಮ್ಮ ಎಂಎಲ್​ಸಿ ಸ್ಥಾನಕ್ಕೆ ಗುಡ್​ಬೈ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net