ಮಾಂಸ ತಿಂದು ದೇವರ ದರ್ಶನ ಮಾಡಿದ್ರಾ ಸಿ.ಟಿ ರವಿ? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ ಬಾಡೂಟದ ಫೋಟೋ

CT Ravi went to the temple after eating meat
Published on

ಉತ್ತರಕನ್ನಡ: ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನೂಟ ಸೇವಿಸಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ಎಂಬ ವಿಚಾರ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿತ್ತು. ಇದು ಚುನಾವಣೆಯ ಆರೋಪ, ಪ್ರತ್ಯಾರೋಪಗಳ ವಿಷಯವಾಗಿ ಕಾವು ಪಡೆದುಕೊಂಡಿತ್ತು. ಇದೀಗ 2023ರ ವಿಧಾನಸಭಾ ಚುನಾವಣೆ ಹತ್ತರವಾಗುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಂಸದ ಊಟ ಮಾಡಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಫೆ.19ರಂದು ಸಿ.ಟಿ.ರವಿ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ್ದು, ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ತೆರಳಿದ್ದರು. ಮಾರ್ಗಮಧ್ಯೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಸ್ಥಾನದ ಬಾಗಿಲಲ್ಲೇ ಸನ್ಮಾನವನ್ನೂ ಸ್ವೀಕರಿಸಿದ್ದರು.

ಶಾಸಕರೊಂದಿಗೆ ಮನೆಯಲ್ಲಿ ಸಿ.ಟಿ,ರವಿ ಬಾಡೂಟ ಸೇವಿಸುತ್ತಿರುವ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರೀ ಚರ್ಚೆ ಹುಟ್ಟು ಹಾಕಿದೆ. ಮಾಂಸ ಸೇವಿಸಿ ಸಿ,ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ಮಾತುಗಳು ಇದೀಗ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net