

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯಾದ್ಯಂತ ನಾಯಿಕೊಡೆಗಳಂತೆ ಬೆಳೆದಿರುವ ಪೂರ್ವ ಪ್ರಾಥಮಿಕ ಶಿಕ್ಷಣ (ಪ್ರಿ ಸ್ಕೂಲ್) ಸಂಸ್ಥೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಶಾಲಾ ಶಿಕ್ಷಣ ಇಲಾಖೆ, ಆಟದ ಮನೆ, ಶಿಶುವಿಹಾರ, ನರ್ಸರಿ ಸೇರಿ ಎಲ್ಲ ರೀತಿಯ ಪೂರ್ವ ಪ್ರಾಥಮಿಕ ಶಿಕ್ಷಣ ಶಾಲೆಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.
ಮೂರರಿಂದ ಐದು ವರ್ಷದೊಳಗಿನ ಮಕ್ಕಳಿಗೆ ಅನೌಚಪಚಾರಿಕ ಶಿಕ್ಷಣವೆಂದು ಪರಿಗಣಿಸಲಾಗಿದೆ. ಹೊಸದಾಗಿ ಖಾಸಗಿ ಅನುದಾನ ರಹಿತ ಪೂರ್ವ ಪ್ರಾಥಮಿಕ ಶಾಲೆಗಳನ್ನು ಮಾತ್ರ ಪ್ರಾರಂಭಿಸುವವರು ಇಲಾಖೆ ವೆಬ್‌ಸೈಟ್‌ನಲ್ಲಿ ಸ್ಯಾಟ್ಸ್ ಪೋರ್ಟಲ್‌ನಲ್ಲಿ ನೋಂದಣಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವರ್ಷಪೂರ್ತಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. 2017ರಿಂದಲೇ ನಿಯಮವು ಚಾಲ್ತಿಯಲ್ಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಯಾಟ್ಸ್ ಪೋರ್ಟಲ್‌ನಲ್ಲಿ ಹೊಸದಾಗಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ,
ಶಾಲೆಗಳನ್ನು ಆರಂಭಿಸಲು ಉದ್ದೇಶಿಸಿರುವವರು ಮೂರು ತಿಂಗಳು ಮುಂಚಿತವಾಗಿ ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅನುಮತಿ ಪಡೆಯದೆ ಶಾಲೆಗಳನ್ನು ಆರಂಭಿಸುವಂತಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.