ದರ್ಶನ್​ಗೆ ಮತ್ತೆ ಸಂಕಷ್ಟ

ವಿಜಯವಾಣಿ (6)
Published on

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯ ಸರ್ಕಾರದ ಪರ ವಾದ ಮಾಡಲು ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ಧಾರ್ಥ್ ಲೂತ್ರಾ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೂಷ್​ಗೆ ಹೈಕೋರ್ಟ್ ಡಿ.13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

7 ದಿನಗಳಲ್ಲಿ ಮೇಲ್ಮನವಿ ಸಲ್ಲಿಕೆ: ರಾಜ್ಯ ಸರ್ಕಾರದ ಅನುಮತಿ ಬೆನ್ನಲ್ಲೇ ಪೊಲೀಸರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಆರಂಭಿಸಿದ್ದಾರೆ. ಸರ್ಕಾರಿ ಅಭಿಯೋಜಕರ ನೆರವಿನಿಂದ ಪ್ರಕರಣದ ದೋಷಾರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲಿಷ್​ಗೆ ತರ್ಜುಮೆ ಮಾಡಿಸಲು ಮುಂದಾಗಿದ್ದಾರೆ. ಇನ್ನೊಂದು ವಾರದೊಳಗೆ ದಾಖಲೆಗಳು, ಅರ್ಜಿಯನ್ನು ಸಿದ್ಧಪಡಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net