

ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಈ ಪ್ರಕರಣದಿಂದ ಇಡೀ ಚಿತ್ರರಂಗವೇ ಶಾಕ್ಗೆ ಒಳಗಾಗಿದೆ. ಅದಕ್ಕಿಂತಲೂ ಹೆಚ್ಚಾಗಿ ದರ್ಶನ್ ಕುಟುಂಬದ ಮೇಲೆ ತೀವ್ರ ಪರಿಣಾಮ ಬೀರಿದೆ. ಕೆಲವು ದಿನಗಳ ಹಿಂದೆ ತಂದೆ ಕುರಿತಾಗಿ ಪೋಸ್ಟ್ ಮಾಡಿದ್ದ ದರ್ಶನ್ ಪುತ್ರ ವಿನೀಶ್ ಇದೀಗ ಮತ್ತೆ ಫಾದರ್ಸ್ ಡೇಗೆ ಭಾವುಕ ಪೋಸ್ಟ್ ಮಾಡಿದ್ದಾನೆ.
ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.
”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.
ದರ್ಶನ್ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಇದರ ಮಧ್ಯೆಯೇ, ದರ್ಶನ್ ಪುತ್ರ ವಿನೀಶ್ ತೂಗುದೀಪ ಭಾವನಾತ್ಮಕ ಪೋಸ್ಟ್ ಮಾಡಿದ್ದ. “ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್ ತೂಗುದೀಪ ಬೇಸರದ ಪೋಸ್ಟ್ ಮಾಡಿದ್ದನು.
ಏನಿದು ಪ್ರಕರಣ?
ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್‌ಗೆ ತಿಳಿದಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.