ಉಪಪಂಗಡಗಳಲ್ಲಿ ಜಾಗೃತಿಗೆ ಡಿಸಿಎಂ ಸೂಚನೆ

DCM
Published on

ಬೆಂಗಳೂರು: ರಾಜ್ಯದಲ್ಲಿ ಜಾತಿ ಜನಗಣತಿ ಮರು ಸಮೀಕ್ಷೆ ನಡೆಸಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸಿ ಒಕ್ಕಲಿಗ ಸಮುದಾಯ ಮೀಸಲಾತಿ ಹೋರಾಟ ಸಮಿತಿ ಮತ್ತು ಒಕ್ಕಲಿಗ ನೌಕರರ ಒಕ್ಕೂಟ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸನ್ಮಾನಿಸಿತು.

ಶುಕ್ರವಾರ ಸದಾಶಿವನಗರದ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಮಿತಿ ಅಧ್ಯಕ್ಷ ಗಾ.ನಂ. ಶ್ರೀಕಂಠಯ್ಯ, ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಮತ್ತು ಸಂಚಾಲಕರು ಡಿಸಿಎಂಗೆ ಸನ್ಮಾನಿಸಿದರು. ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದಿಂದ ಎಲ್ಲ ಸಮೂದಾಯಕ್ಕೆ ಅನುಕೂಲವಾಗಲಿದೆ ಎಂದು ಅಭಿನಂದನೆ ಸಲ್ಲಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜು ವರದಿ, 10 ವರ್ಷಗಳ ಹಿಂದೆ ಸಮೀಕ್ಷೆ ನಡೆಸಲಾಗಿತ್ತು. ಈ ಹತ್ತು ವರ್ಷಗಳಲ್ಲಿ ಸಾಕಷ್ಟು ಬದಲಾವಣೆ ಆಗಿದ್ದು, ಜನಸಂಖ್ಯೆಯಲ್ಲಿ ಸಹ ಏರುಪೇರು ಉಂಟಾಗಿದೆ. ಆ ಸಮಯದಲ್ಲಿ ಬಹುತೇಕರಿಗೆ ಸಮೀಕ್ಷೆಯಲ್ಲಿ ಭಾಗವಹಿಸುವ ಅರಿವು ಇರಲಿಲ್ಲ. ಇದೀಗ ಪ್ರತಿಯೊಂದು ಸಮುದಾಯದಲ್ಲಿಯೂ ಜಾಗೃತಿ ಮೂಡಿಸಿ ಗಣತಿಯಲ್ಲಿ ಭಾಗವಹಿಸುವಂತೆ ಮಾಡಬೇಕು. ಜಾತಿ ಜತೆಗೆ ಉಪ ಪಂಗಡಗಳ ಬಗ್ಗೆಯೂ ಅರಿವು ಮೂಡಿಸುವ ಕೆಲಸ ಆಯಾ ಸಮುದಾಯದ ಮುಖಂಡರು ಕೈಗೊಳ್ಳಬೇಕೆಂದು ಡಿ.ಕೆ. ಶಿವಕುಮಾರ್, ಸಮಿತಿ ಮತ್ತು ಒಕ್ಕೂಟದ ಪದಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net