

ಬೆಂಗಳೂರು: ನಮ್ಮ ರಾಜ್ಯಕ್ಕೆ ಕರ್ನಾಟಕವೆಂಬ ಹೆಸರು ನಾಮಕರಣವಾಗಿ 5 ದಶಕವಾಗಿದೆ. ಈ ಮಹೋನ್ನತ ಘಳಿಗೆಯನ್ನು ಸ್ಮರಿಸಿಕೊಳ್ಳುವ, ಸಂಭ್ರಮಿಸುವ ಸಲುವಾಗಿ ಕರ್ನಾಟಕ ರಕ್ಷಣಾ ವೇದಿಕೆ ಡಿಸೆಂಬರ್ 28ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿವಿಹಾರ ಸಭಾಂಗಣದಲ್ಲಿ 50ರ ಸಂಭ್ರಮ ಸಮಾವೇಶ ಮತ್ತು ಪ್ರತಿಜ್ಞಾ ಸ್ವೀಕಾರ ಸಮಾರಂಭ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದೆ.
ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಚಿತ್ರದುರ್ಗ ಬೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹಾಗು ಗೌರಿಗದ್ದೆಯ ಸ್ವರ್ಣ ಪೀಠಿಕಾಪುರದ ಶ್ರೀ ವಿನಯ್ ಗುರೂಜಿಯವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎನ್.ನಾರಾಯಣಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಮಾರಂಭನ್ನು ಉದ್ಘಾಟನೆಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 25 ವಿವಿಧ ಕ್ಷೇತ್ರಗಳ ಸಾಧಕರ ಕೃತಿ ಶ್ರೇಣಿಯನ್ನು ಲೋಕಾರ್ಪಣೆಗೊಳಿಸುವರು. ಇದೇ ವೇಳೆ ರೈಲ್ವೆ ಇಲಾಖೆಯ ವಿವಿಧ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕರ್ನಾಟಕ ರಕ್ಷಣಾ ವೇದಿಕೆಯ ಕ್ರಾಂತಿಗೀತೆಗಳ ಧ್ವನಿಸುರಳಿಯನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ. ಆರ್.ಕೆ.ನಲ್ಲೂರು ಪ್ರಸಾದ್ ಸೇರಿ ವಿವಿಧ ಗಣ್ಯರು ಉಪಸ್ಥಿತಿ ವಹಿಸಲಿದ್ದಾರೆ ಎಂದು ತಿಳಿಸಿದರು.