10 ದಿನದಲ್ಲಿ ಪ್ರಜ್ವಲ್ ಜಾಮೀನು ನಿರ್ಧರಿಸಿ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

highcourt
Published on

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು ಎಂದು ಹೈಕೋರ್ಟ್ ಹೇಳಿದೆ.

ಅಲ್ಲದೆ, ಪ್ರಜ್ವಲ್ ಸಲ್ಲಿಸಿದ ಜಾಮೀನು ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಲು ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ಕಸದಸ್ಯ ಪೀಠ ವಿಚಾರಣೆ ನಡೆಸಿತು. ಕಳೆದ ವಿಚಾರಣೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಇಂತಹ ಪ್ರಕರಣಗಳಲ್ಲಿ ಆರೋಪಿಯು ಮೊದಲಿಗೆ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲಿ ಅರ್ಜಿ ವಜಾಗೊಳಿಸಿದಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಬಹುದು. ಆದರೆ, ಹಾಲಿ ಪ್ರಕರಣದಲ್ಲಿ ನೇರವಾಗಿ ಹೈಕೋರ್ಟ್‌ಗೆ ಬಂದಿರುವುದರಿಂದ ಅವರ ಅರ್ಜಿ ಪುರಸ್ಕರಿಸಬಾರದು ಎಂದಿದ್ದರು. ಇದೇ ವಿಚಾರ ಪ್ರಸ್ತಾಪಿಸಿದ ನ್ಯಾಯಾಲಯ, ಮೊದಲಿಗೆ ಅರ್ಜಿದಾರರು ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಲಿ ಎಂದು ಹೇಳಿ ಅರ್ಜಿ ಇತ್ಯರ್ಥಪಡಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net