ರಾಜ್ಯದಲ್ಲಿ ಮಾದಕವಸ್ತು ಜಾಲ ಮೂಲೋತ್ಪಾಟನೆಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

IMG-20240918-WA0019
Published on

ಬೆಂಗಳೂರು: ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಿ, ನಂತರ ಮೂಲೋತ್ಪಾಟನೆಗೆ ತೀರ್ಮಾನಿಸಿದ್ದೇವೆ. ಇದಕ್ಕಾಗಿ ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ.  ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾದಕವಸ್ತು ನಿಯಂತ್ರಣ ಕುರಿತು ಸಚಿವರು, ಹಿರಿಯ ಅಧಿಕಾರಿಗಳ ಜಂಟಿ ಸಭೆ ಬುಧವಾರ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ.

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು ಎಸ್ ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಜಬಾಬ್ದಾರಿ ನಿಭಾಯಿಸುವಲ್ಲಿ ವಿಫಲರಾದವರ ವಿರುದ್ಧವೇ ಕ್ರಮ ಖಚಿತವೆಂದರು.

ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ. ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿ ಮಾಡಲಾಗುವುದು. ಎನ್ ಸಿಸಿ, ಎನ್ ಜಿಒಗಳನ್ನು ಬಲಗೊಳಿಸಲಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ, ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ದುಷ್ಪರಿಣಾಮಕ್ಕೆ ತಡೆ

ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ. ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳನ್ನು ನಿಯಂತ್ರಿಸಲಿದ್ದು, ಪೊಲೀಸರಿಗೆ ಮುಕ್ತ ಅವಕಾಶ ಕೊಡುವ ಜತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತಗೊತೀವಿ ಎಂದು ಎಚ್ಚರಿಸಿದರು.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ವಿವರಿಸಿದರು.

ಜಾಗೃತಿ, ಕಾರ್ಯಾಚರಣೆ

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ ಎಂದರು.

ಒಡಿಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net