ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದಮ್ಮೆ ರದ್ದು

highcourt
Published on

ಬೆಂಗಳೂರು: ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ವಿಚಾರಣಾ ನ್ಯಾಯಾಲಯಕ್ಕೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಶಿವಾನಂದ ಪಾಟೀಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಯತ್ನಾಳ್ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ದೂರಿನಲ್ಲಿ ತಿಳಿಸಿರುವಂತೆ ಸಚಿವ ಶಿವಾನಂದ ಪಾಟೀಲರ ಬಗ್ಗೆ ಅರ್ಜಿದಾರರು ವೈಯಕ್ತಿಕ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಭಾರತೀಯ ದಂಡ ಸಂಹಿತೆ 1860ರ ಕಲಂ 171 ಜಿ ಮತ್ತು ಜನಪ್ರತಿನಿಧಿ ಕಾಯ್ದೆ1950ರ ಕಲಂ 123 (4) ಪ್ರಕಾರ ಅಭ್ಯರ್ಥಿ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಅಪರಾಧವಾಗುತ್ತದೆ.

ಆದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಸಂಯುಕ್ತಾ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು ಹೊರತು ಶಿವಾನಂದ ಪಾಟಿಲ ಅವರು ಅಲ್ಲ. ಹಾಗಾಗಿ, ಈ ನಿಯಮವನ್ನು ಯತ್ನಾಳ್ ಅವರಿಗೆ ಅನ್ವಯಿಸಿ ಪ್ರಕರಣ ನಡೆಸುವುದು ಕಾನೂನಿನ ದುರ್ಬಳಕೆ ಆಗುತ್ತದೆ. ಹಾಗಾಗಿ ಅರ್ಜಿದಾರರ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. ಈ ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net