ಬಿಜೆಪಿಗೆ ಹೋದವರಿಗೆ ಸೋಲು ಖಚಿತ: ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಭವಿಷ್ಯ

ಚಿಕ್ಕಬಳ್ಳಾಪುರ ತಾಲೂಕಿನ ನಂದಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಬಸ್ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಘು, ಸದಸ್ಯ ವಿನಯ್ ಶ್ಯಾಮ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್.ರಮೇಶ್ ಮತ್ತಿತರರು ಇದ್ದರು.

Published on

ಚಿಕ್ಕಬಳ್ಳಾಪುರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಶಾಸಕರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಭವಿಷ್ಯ ನುಡಿದರು.

ತಾಲೂಕಿನ ನಂದಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಬಸ್ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಕ್ಷವು ಒಳ್ಳೆಯ ಅವಕಾಶ, ಸೂಕ್ತ ಸ್ಥಾನಮಾನ ಸೇರಿದಂತೆ ಎಲ್ಲವನ್ನೂ ನೀಡಿತು. ಆದರೆ, ಇದನ್ನು ಲೆಕ್ಕಿಸದೇ ಅಧಿಕಾರಕ್ಕಾಗಿ ದ್ರೋಹವೆಸಗಲಾಯಿತು. ಇದಕ್ಕೆ
ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಲಿದ್ದಾರೆ ಎಂದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ನೀತಿಗಳು ಜನ ವಿರೋಧಿಯಾಗಿವೆ. ಬಡ ಮತ್ತು ಮಧ್ಯಮ ವರ್ಗದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆ, ಸಮರ್ಪಕವಾಗಿ ಸಿಗದ ಸವಲತ್ತುಗಳು, ಉತ್ತಮ ಜೀವನ ನಡೆಸಲು ಪರದಾಟದ ಸ್ಥಿತಿಯಿಂದ ಬೇಸತ್ತಿದ್ದಾರೆ. ಇದನ್ನು ಮರೆ ಮಾಚಲು ಗೊಂದಲ, ವಿವಾದಗಳನ್ನು ಸೃಷ್ಟಿಸಿ, ಸೂಕ್ಷ್ಮ ವಿಚಾರಗಳಲ್ಲಿ ಲಾಭ ಪಡೆಯುವಂತಾಗುತ್ತಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಗ್ರಂಥಾಲಯ, ಕನ್ನಡ ಕಲಾ ಭವನ ನಿರ್ಮಾಣ ಸೇರಿದಂತೆ ಅನೇಕ ಕೊಡುಗೆಗಳನ್ನು ಕಾಂಗ್ರೆಸ್ ನೀಡಿದೆ. ಇದಕ್ಕೂ ಹೆಸರೇಳಿಕೊಳ್ಳುತ್ತಿರುವ ಸಚಿವ ಸುಧಾಕರ್ ಚುನಾವಣೆಯಲ್ಲಿ ನೂರಕ್ಕೆ ನೂರು ಸೋಲುವುದು ಖಚಿತ ಎಂದರು.

ರಾಜ್ಯದಲ್ಲಿ ಸ್ಪಷ್ಟ ಬಹುಮತವಿಲ್ಲದಿದ್ದರೂ ಆಪರೇಷನ್ ಕಮಲದ ಮೂಲಕ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಜತೆಗೆ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಇದರಿಂದ ಕಾಂಗ್ರೆಸ್ ಪರ ಹೆಚ್ಚಿನ ಒಲವು ವ್ಯಕ್ತವಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಅಧಿಕಾರಕ್ಕೆ ತರಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಎಂ.ಶಿವಾನಂದ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಘು, ಸದಸ್ಯ ವಿನಯ್ ಶ್ಯಾಮ್, ಜಿಪಂ ಮಾಜಿ ಅಧ್ಯಕ್ಷ ಗಂಗರೆಕಾಲುವೆ ನಾರಾಯಣಸ್ವಾಮಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ಮುಖಂಡರಾದ ಮಂಡಿಕಲ್ ನಾರಾಯಣಸ್ವಾಮಿ, ಜಯರಾಮ್ ಮತ್ತಿತರರು ಇದ್ದರು.

23ಕ್ಕೆ ಪ್ರಜಾಧ್ವನಿ ಯಾತ್ರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜ.23ರಂದು ಪ್ರಜಾಧ್ವನಿ ಬಸ್ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ, ಸಲಹೆಗಳನ್ನು ಪಡೆದುಕೊಳ್ಳಲಾಯಿತು. ಮೊದಲಿನಿಂದಲೂ ಜಿಲ್ಲೆಯ ಕಾಂಗ್ರೆಸ್‌ನ ಭದ್ರಕೋಟೆ. ಇದರ ನಡುವೆ ಪ್ರಜಾಧ್ವನಿ ಯಾತ್ರೆಯು ಪಕ್ಷಕ್ಕೆ ಹೊಸ ಶಕ್ತಿ ನೀಡಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ತಿಳಿಸಿದರು.

ಪ್ರಚಾರದ ಲಾಭ ಪಡೆಯುತ್ತಿರುವ ಭಾಜಪಾ: ಕಾಂಗ್ರೆಸ್ ಕೈಗೆತ್ತಿಕೊಂಡ ಬೃಹತ್ ಯೋಜನೆಗಳ ಲಾಭವನ್ನು ಕೊನೆಯ ಹಂತದಲ್ಲಿ ಪ್ರಚಾರದ ಮೂಲಕ ಬಿಜೆಪಿ ಪಡೆದುಕೊಳ್ಳುತ್ತಿದೆ. ಕಂದಾಯ ಗ್ರಾಮಗಳ ಘೋಷಣೆಯ ನೋಟಿಫಿಕೇಷನ್ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಪ್ರಕಟಿಸಲಾಗಿತ್ತು. ಈಗಲೂ ಕಾಡುತ್ತಿರುವ ಕೃಷ್ಣನದಿ, ಕಾವೇರಿ, ಮಹದಾಯಿ ನದಿ ನೀರಿನ ಹಂಚಿಕೆಯ ವಿವಾದ ಪರಿಹಾರಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ನೋಟಿಫಿಕೇಷನ್ ಹೊರಡಿಸಲು ಸಾಧ್ಯವಾಗಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕಿಸಿದರು.

ಪ್ರಮಾಣ ಮಾಡಿದ ಆಕಾಂಕ್ಷಿಗಳು: ಪ್ರತ್ಯೇಕ ಸಂಘಟನೆ ಮತ್ತು ವರ್ಚಸ್ಸಿನ ವೃದ್ಧಿಯಲ್ಲಿ ತೊಡಗಿರುವ ಮುಂಬರುವ ವಿಧಾನಸಭಾ ಚುನಾವಣೆಯ ಆಕಾಂಕ್ಷಿಗಳಿಂದ ಒಗ್ಗಟ್ಟಿನಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವ ಪ್ರಮಾಣ ಮಾಡಿಸಲಾಯಿತು. ನಂದಿಯ ಭೋಗನಂದೀಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಆವರಣದಲ್ಲಿ ಪಕ್ಷವು ಚುನಾವಣೆಯಲ್ಲಿ ಗೆಲ್ಲಲೇಬೇಕು. ಇದಕ್ಕೆ ಸ್ವಪಕ್ಷೀಯರು ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೇ ಸಂಘಟನೆಗೆ ಶ್ರಮಿಸಬೇಕು. ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಬಸ್ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಘು, ಸದಸ್ಯ ವಿನಯ್ ಶ್ಯಾಮ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಎನ್.ರಮೇಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net