

ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮಹತ್ವದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದು, ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಕುರಿತು ರಕ್ಷಣಾ ಸಚಿವರು ಮಾಹಿತಿ ಪಡೆಯಲಿದ್ದಾರೆ. ಈ ನಡುವೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ.
ದೇಶದ ಎಂಟು ರಾಜ್ಯಗಳಲ್ಲಿ ತೀವ್ರ ವಿರೋಧ ಎದುರಾಗಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಿಹಾರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪೈಕಿ ಓರ್ವ ಮೃತಪಟ್ಟಿದ್ದಾನೆ.
ತೆಲಂಗಾಣದಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ 24 ವರ್ಷದ ಯುವಕ ಮೃತಪಟ್ಟಿದ್ದು, ಮೃತ ಯುವಕನ ಕುಟುಂಬಕ್ಕೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ 25 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಆತನ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಈವರೆಗೆ 250 ಮಂದಿಯನ್ನು ಬಂಧಿಸಲಾಗಿದ್ದು, ಬಸ್, ರೈಲುಗಳಿಗೆ ಬೆಂಕಿ ಹಚ್ಚಿದ ಇನ್ನೂ ಕೆಲವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. (ಏಜೆನ್ಸೀಸ್)