

ನವದೆಹಲಿ: ಈಶಾನ್ಯ ದೆಹಲಿಯ ಹಿಂಸಾಚಾರದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಯಾವುದೇ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು. ಯಾವುದೇ ಆಮ್ ಆದ್ಮಿ ಪಕ್ಷದ ವ್ಯಕ್ತಿ ತಪ್ಪಿತಸ್ಥರೆಂದು ಸಾಬೀತಾದರೆ ಆ ವ್ಯಕ್ತಿಗೆ ಎರಡು ಪಟ್ಟು ಶಿಕ್ಷೆ ವಿಧಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎಚ್ಚರಿಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಕೀಯ ಇರಬಾರದು ಎಂದು ಅಭಿಪ್ರಾಯ ಪಟ್ಟ ಅವರು, ತಮ್ಮ ಪಕ್ಷದ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ ಹಿಂಸಾಚಾರದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅದರಂತೆ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ದೆಹಲಿ ರಾಜ್ಯ ಸರ್ಕಾರದ ಫರಿಶ್ತೆ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಫರಿಶ್ತೆ ಯೋಜನೆಯಡಿ ಯಾವುದೇ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)