

ನವದೆಹಲಿ: ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕಿ, ಶಿಕ್ಷಣ ಸಚಿವೆ ಅತಿಶಿ ಅವರಿಗೆ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಜೂನ್ 29 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಸಮನ್ಸ್ನಲ್ಲಿ ಉಲ್ಲೇಖಿಸಿಲಾಗಿದೆ. ಇತ್ತೀಚೆಗೆ ಬಿಜೆಪಿ ವಕ್ತಾರ ಶಂಕರ್ ಕಪೂರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಸಚಿವೆ ಅತಿಶಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರೀ ಹಿನ್ನಡೆಯಾಗಿದೆ. ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಮತ್ತಷ್ಟು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್ ಸಿಕ್ಕಿತ್ತು. ಇದೀಗ ತಮ್ಮ ಆರೋಗ್ಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಮೀನು ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು.
ಏನಿದು ಅಬಕಾರಿ ನೀತಿ ಹಗರಣ?
ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.
ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ 100 ಕೋಟಿ ರೂ. ಕಿಕ್ಬ್ಯಾಕ್ಗಳನ್ನು ಸ್ವೀಕರಿಸಿದ್ದಾರೆ. ಆರೋಪ ಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.