

ನವದೆಹಲಿ: ಮಾರಕ ಕೊರೊನಾ ವೈರಸ್ ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡಲು ಹಾಗೂ ವೈರಸ್ ಹರಡುವುದನ್ನು ನಿಯಂತ್ರಿಸಲು ಸರ್ಕಾರ ತುರ್ತು ಕಾರ್ಯಪಡೆ ರಚನೆ ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು.
ನನ್ನ ನೇತೃತ್ವದಲ್ಲಿ ಕಾರ್ಯಪಡೆ ರಚನೆಯಾಗಿದ್ದು ಆರೋಗ್ಯ ಇಲಾಖೆಯ ಸಿಬ್ಬಂದಿ ಪಡೆಯಲ್ಲಿದ್ದಾರೆ. ವೈರಸ್ ನಿಯಂತ್ರಿಸಲು ಈ ಕಾರ್ಯಪಡೆ ತುರ್ತುಕ್ರಮ ಕೈಗೊಳ್ಳಲಿದೆ. ಹೀಗಾಗಿ ಜನರು ಭೀತಿ ಪಡುವ ಅವಶ್ಯಕತೆ ಇಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೆಹಲಿಯ ಲೇಡಿ ಹಾರ್ಡಿಂಗ್ ಹಾಗೂ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಹೇಳಿದರು.
ದೇಶದಲ್ಲಿ 28 ಮಂದಿಗೆ ಕೊರೊನಾ ವೈರಸ್ ತಗುಲಿದೆ. 14 ಮಂದಿ ಇಟಲಿ ಪ್ರವಾಸಿಗರು ಹಾಗೂ ಅವರೊಂದಿಗೆ ಸಂಪರ್ಕಕ್ಕೆ ಬಂದ ಭಾರತೀಯರನ್ನು ಕೂಡ ತಪಾಸಣೆಗೆ ಒಳಪಡಿಸಲಾಗಿದೆ.
ರಾಷ್ಟ್ರಕ್ಕೆ ವಿದೇಶದಿಂದ ಆಗಮಿಸುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇದೇ ವೇಳೆ ತಿಳಿಸಿದ್ದಾರೆ. (ಏಜೆನ್ಸೀಸ್)