

ಕೋಲಾರ: ಈ ಬಾರಿಯ ಸಚಿವ ಸಂಪುಟ ಪುನಾರಚನೆಯ ಸಂದರ್ಭದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ 6 ಕ್ಷೇತ್ರಗಳ ಪೈಕಿ 4 ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಸರ್ಕಾರದ ಪೂರ್ಣ ಅವಧಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿದರು.
ದಶಕಗಳಿಂದ ಜಿಲ್ಲೆಯ ಶಾಸಕರಿಗೆ ಸಚಿವಸ್ಥಾನ ಸಿಕ್ಕಿಲ್ಲ, ಕೆ.ಆರ್.ರಮೇಶ್ ಕುಮಾರ್ ಅವರು ಅಲ್ಪಾವಧಿ ಮಾತ್ರ ಸಚಿವರಾಗಿದ್ದರು. ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಪೂರ್ಣಪ್ರಮಾಣದ ಸಚಿವಸ್ಥಾನ ಸಿಕ್ಕಿ ಎರಡು ದಶಕಗಳೇ ಕಳೆದಿವೆ, ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಎರಡು ಸಚಿವಸ್ಥಾನ ಸಿಗಬೇಕು ಎಂಬುದು ಕಾಂಗ್ರೆಸ್ ಕಾರ್ಯಕರ್ತರಿಗೆ ಒತ್ತಾಸೆಯಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಕೋಲಾರ ಜಿಲ್ಲೆಯು ಇನ್ನು ಹೆಚ್ಚಿನ ಅಭಿವೃದ್ಧಿ ಹೊಂದಬೇಕಾಗಿದೆ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಗೆ ಎರಡು ಸಚಿವಸ್ಥಾನ ಕೊಡಬೇಕು ಎಂದರು.