

ಕೊಳ್ಳೇಗಾಲ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಹಾಗೂ ತಹಸೀಲ್ದಾರ್ ಮಂಜುಳಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು. ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು ಒತ್ತಾಯಿಸಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಬಳಿಕ, ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಕ್ರಿಯಿಸಿ, ನಿಮ್ಮ ಬೇಡಿಕೆಗಳ ಬಗ್ಗೆ ಈ ಬಾರಿಯ ಸದನದಲ್ಲಿ ಮಾತನಾಡಿ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜೋಸೆಫ್ ಅಲೆಗ್ಸಾಂಡರ್, ಕಾರ್ಯದರ್ಶಿ ಚಿಕ್ಕರಾಜು, ಖಜಾಂಚಿ ಎಂ.ಶಾಂತಪ್ಪ, ರಾಜ್ಯ ಪರಿಷತ್ ಸದಸ್ಯ ವೀರೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಬುಕಾನಿ ಹಾಗೂ ಕೊಳ್ಳೇಗಾಲ, ಯಳಂದೂರು ಸಂಘದ ಪದಾಧಿಕಾರಿಗಳು ಇದ್ದರು.