

ಮೈಸೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಟೆರೇಷಿಯನ್ ಕಾಲೇಜು ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಘೋಷಣೆಗಳನ್ನು ಕೂಗಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.
ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ 30 ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂಧ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನೆಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಸಂವಿಧಾನ ಪೀಠ ಆ.1ರಂದು ಐತಿಹಾಸಿಕ ತೀರ್ಪು ನೀಡಿ ಈ ವಿವಾದಕ್ಕೆ ತೆರೆ ಎಳೆದಿದೆ. ಹೀಗಾಗಿ ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.