

ಶಿವಮೊಗ್ಗ: ಚುನಾವಣೆ ಸಂದರ್ಭ ನೀಡಿದ್ದ ಭರವಸೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಡಲೇ ಈಡೇರಿಸುವ ಮೂಲಕ ರೈತರು, ಕಾರ್ಮಿಕರ ಹಿತ ಕಾಯಬೇಕೆಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಭರವಸೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮರೆತಿವೆ. ಕಾರ್ಪೋರೇಟ್ ಆಡಳಿತ ನೀತಿಯಿಂದ ರೈತರು, ಕಾರ್ಮಿಕರು, ದುಡಿಯುವ ವರ್ಗ ಹಾಗೂ ಸಣ್ಣಪುಟ್ಟ ವ್ಯಾಪಾರಸ್ಥರು ಬೀದಿಗೆ ಬೀಳುವಂತಾಗಿದೆ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಬೆಳೆ ನಷ್ಟದ ಪರಿಹಾರವೂ ಸಿಗದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದಿನ ಬಿಜೆಪಿ ಸರ್ಕಾರ ಕೃಷಿ ಕಾಯ್ದೆಗೆ ತಿದ್ದುಪಡಿ ತಂದಿದ್ದನ್ನು ರದ್ದು ಪಡಿಸುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಿಸಿತ್ತು. ಅದಿನ್ನೂ ಕಾರ್ಯಗತವಾಗಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೂರು ದಿನಗಳ ಜನತಾ ಅಧಿವೇಶನವನ್ನು ರಾಜ್ಯ ಸರ್ಕಾರ ಕರೆಯಬೇಕೆಂದು ಆಗ್ರಹಿಸಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಜಮೀನನ್ನು ಅರಣ್ಯ ಇಲಾಖೆಯಿಂದ ಡಿನೋಟಿಫೈ ಮಾಡಿಸಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಯಾವ ಕಾರಣಕ್ಕೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧ ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲ ಎಂದು ವಿಧಾನ ಮಂಡಲದಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಕೇಂದ್ರಕ್ಕೆ ನಿರ್ಣಯ ಕಳಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಸ್ಥಗಿತಗೊಳಿಸಬೇಕು. ಅತಿವೃಷ್ಟಿ, ಅನಾವೃಷ್ಟಿ ಪರಿಹಾರದ ಮಾರ್ಗಸೂಚಿ ಬದಲಿಸಿ ಪರಿಹಾರ ಮೊತ್ತ ಹೆಚ್ಚಿಸಬೇಕು. ಎಕರೆಗೆ ಕನಿಷ್ಠ 20 ಸಾವಿರ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಕರ್ನಾಟಕ ಜನ ಶಕ್ತಿ ಸಂಘಟನೆ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್, ಪ್ರಮುಖರಾದ ಪಂಚಾಕ್ಷರಿ, ಹನುಮಂತಪ್ಪ, ರುದ್ರೇಶ್, ಕೆ.ರಾಘವೇಂದ್ರ, ಚಂದ್ರಪ್ಪ, ಹನುಮಮ್ಮ ಮತ್ತತರರು ಪ್ರತಿಭಟನೆಯಲ್ಲಿದ್ದರು.