

ಶಿವಮೊಗ್ಗ: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬುಧವಾರ ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟದ ಪ್ರಮುಖರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸುಪ್ರೀಂಕೋರ್ಟ್ ಆದೇಶದ ಅನ್ವಯ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಲು ಯಾವುದೇ ಸಮಸ್ಯೆಯಿಲ್ಲ. ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ಮಾಡದೆ ಒಳಮೀಸಲಾತಿ ಜಾರಿ ಮಾಡಬೇಕೆಂದು ಸುಪ್ರೀಂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ರಾಜ್ಯ ಸರ್ಕಾರ ವಿನಾ ಕಾರಣ ವಿಳಂಬ ನೀತಿ ಅನುಸರಿಸುತ್ತಿದೆ. ಎ.ಜೆ.ಸದಾಶಿವ ಆಯೋಗ ವರದಿಯ ದತ್ತಾಂಶಗಳನ್ನು ಬಳಸಿಕೊಂಡು ವರದಿ ತಯಾರಿಸಲು ನಾಗಮೋಹನ್‌ದಾಸ್ ನೇತೃತ್ವದ ಸಮಿತಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಮೀಸಲಾತಿಯ ಶೇ. 17ರ ಅನುಪಾತದಲ್ಲಿ ಹೆಚ್ಚುವರಿ ಶೇ. 2ಮೀಸಲಾತಿಯನ್ನು ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಎಬಿಸಿಡಿ ವರ್ಗೀಕರಣ ಮಾಡಿ ಸಮಾನವಾಗಿ ಹಂಚಬೇಕು. ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7ರಷ್ಟು ಮೀಸಲಾತಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ಸಚಿವ ಸಂಪುಟದಲ್ಲಿ ತೀರ್ಮಾನಿಸಿರುವಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 37 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಅರ್ಹ 49 ಅಲೆಮಾರಿ ಪಂಗಡಗಳನ್ನು ಗುರುತಿಸಿ ಶೇ. 1ಕ್ಕಿಂತ ಹೆಚ್ಚು ಒಳ ಮೀಸಲಾತಿ ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ಪದಾಧಿಕಾರಿಗಳಾದ ಎಂ.ಏಳುಕೋಟಿ, ಶಿವಬಸಪ್ಪ, ಕೃಷ್ಣ ಬೊಮ್ಮನಕಟ್ಟೆ, ರವಿ ಹರಿಗೆ, ಬಸವರಾಜ್, ಎಂ.ರಮೇಶ್ ಚಿಕ್ಕಮರಡಿ, ನಾಗರಾಜ್ ಕಾಚಗೊಂಡನಹಳ್ಳಿ ಮತ್ತಿತರರಿದ್ದರು.